Monday, September 26, 2022

Latest Posts

ದೇಶಾದ್ಯಂತ ಎಸ್‌ಡಿಪಿಐ, ಪಿಎಫ್‌ಐ ನಾಯಕರ ಮನೆ, ಕಚೇರಿಗಳ ಮೇಲೆ ಎನ್‌ಐಎ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯರಾತ್ರಿಯಿಂದಲೇ ರಾಷ್ಟ್ರೀಯ ತನಿಖಾ ದಳ(NIA) ದಿಢೀರ್ ಕಾರ್ಯಾಚರಣೆ ಕೈಗೊಂಡಿದ್ದು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI), ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಚೇರಿಗಳ ಮೇಲೆ ದಾಳಿ ನಡೆಸಿದೆ.

ವಿವಿಧ ರಾಜ್ಯಗಳಲ್ಲಿ ಇರುವ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ಪ್ರಮುಖವಾಗಿ ಆಂಧ್ರಪ್ರದೇಶ, ತೆಲಂಗಾಣ, ಉತ್ತರಪ್ರದೇಶ, ಕೇರಳ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಶೋಧ ನಡೆಯುತ್ತಿದೆ.

ಇದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮೇಲೆ ನಡೆದಿರುವ ಅತಿದೊಡ್ಡ ದಾಳಿಯಾಗಿದೆ. ದೇಶದಲ್ಲಿ ಭಯೋತ್ಪಾದನೆಗೆ ಧನಸಹಾಯ, ಅಕ್ರಮ ಶಸ್ತ್ರಾಸ್ತ್ರ ತರಬೇತಿ ಶಿಬಿರ ಆಯೋಜನೆ ಹಾಗೂ ನಿಷೇಧಿತ ಸಂಘಟನೆಗೆ ಜನರನ್ನು ಸೇರಿಸಲು ಪ್ರಚೋದಿಸಿರುವ ಆರೋಪದ ಮೇಲೆ ಕಾರ್ಯಾಚರಣೆ ನಡೆಯುತ್ತಿದೆ.

ಕೇರಳದ ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿರುವ ಪಿಎಫ್‌ಐ ಅಧ್ಯಕ್ಷ ಒಎಂಎ ಸಲಾಂ ಎಂಬುವರ ಮನೆ ಹಾಗೂ ಕಚೇರಿಗಳ ಮೇಲೆ ಎನ್‌ಐಎ ಏಕಕಾಲಕ್ಕೆ ದಾಳಿ ಮಾಡಿವೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ.

100 ಕ್ಕೂ ಹೆಚ್ಚು ಪಿಎಫ್‌ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ. ಇನ್ನು ಮಂಗಳೂರಿನ ನೆಲ್ಲಿಕಾಯಿ ರಸ್ತೆಯ ಪಿಎಫ್‌ಐ ಕಚೇರಿ ಮೇಲೂ ದಾಳಿ ನಡೆಸಿದ್ದು, ಶಸ್ತ್ರಸಜ್ಜಿತ ಕೇಂದ್ರೀಯ ಪಡೆಗಳೊಂದಿಗೆ ಕಚೇರಿಗೆ ಪ್ರವೇಶಿಸಲಾಗಿದೆ. ಎಸ್‌ಡಿಪಿಐ ಘಟಕದ ಅಧ್ಯಕ್ಷ ಅಬೂಬಕರ್ ಕುಳಾಯಿ ಸೋದರನ ಮನೆಯ ಮೇಲೂ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!