ಮಡಿಕೇರಿ-ಸಂಪಾಜೆ‌ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ನಿಷೇಧ

ಹೊಸದಿಗಂತ ವರದಿ,ಮಡಿಕೇರಿ:

ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆ-ಮಡಿಕೇರಿ ನಡುವಿನ ಕರ್ತೋಜಿ ಬಳಿ ಭೂಕುಸಿತವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.18 ರಿಂದ 22 ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಈ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ-275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ 90.10ರ
ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಈ ಭಾಗದಲ್ಲಿ ಜು. 18 ರಿಂದ 22 ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನುವ ನಿರ್ಬಂಧಿಸುವಂತೆ ರಾಷ್ಟ್ರೀಯ ಹೆದ್ದಾರಿ ಮಡಿಕೇರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರು ಕೋರಿದ್ದರು.

ಪ್ರಸಕ್ತ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ನೀಡಿರುವ ವರದಿಯಂತೆ ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅತಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದಾಗಿ ಹೇಳಲಾಗಿದೆ. ಇಂಜಿನಿಯರ್ ಅವರ ಕೋರಿಕೆ ಹಾಗೂ ಹವಾಮಾನ ಇಲಾಖೆಯ ವರದಿಯಂತೆ ಸಾರ್ವಜನಿಕ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಎಂಬ ಭಾಗದಲ್ಲಿ ಮುಂಜಾಗ್ರತಾ ಕ್ರಮವಾಗಿ ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿ, ಸಿಬ್ಬಂದಿಗಳು ಸಂಚರಿಸುವ ವಾಹನಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಮೇಲೆ ತಿಳಿಸಿದ ಅವಧಿಯಲ್ಲಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಈ ಜಿಲ್ಲೆಯ ಮುಖಾಂತರ ಮೈಸೂರು, ಬೆಂಗಳೂರು ಮುಂತಾದ ಸ್ಥಳಗಳಿಗೆ ಸಂಚರಿಸುವ ವಾಹನಗಳು ಬದಲಿ ರಸ್ತೆಯಾದ ಚಾರ್ಮಾಡಿ ಘಾಟ್ – ಕೊಟ್ಟಿಗೆಹಾರ ಮಾರ್ಗವನ್ನು ಬಳಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!