ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಸೋಮವಾರ ನವದೆಹಲಿಯಲ್ಲಿ ಭೇಟಿ ಮಾಡಿದ್ದು, ಭೇಟಿ ವೇಳೆ ಬಿಬಿಎಂಪಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಎನ್‌ಡಿಎ ಬಲಪಡಿಸುವ ಕುರಿತು ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.
ನವದೆಹಲಿಯಲ್ಲಿಯೇ ಉಳಿದುಕೊಂಡಿರುವ ನಿಖಿಲ್ ಅವರು ಶೀಘ್ರದಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನೂ ಭೇಟಿಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಅಮಿತ್ ಶಾ ಭೇಟಿ ಕುರಿತು ಪ್ರತಿಕ್ರಿಯೆ ನೀಡಿರುವ ನಿಖಿಲ್ ಅವರು, ಅಮಿತ್ ಶಾ ಭೇಟಿ ವೇಳೆ ಚನ್ನಪಟ್ಟಣ ಉಪಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆ ನಡೆಸಲಾಯಿತು. ಅವರು ಕೆಲ ಅಮೂಲ್ಯವಾದ ಸಲಹೆಗಳನ್ನು ನೀಡಿದರು. ರಾಜ್ಯದಲ್ಲಿ ಎನ್‌ಡಿಎಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಪ್ರೋತ್ಸಾಹಿಸಿದರು. ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಿನಿಂದ ಹೋರಾಡಲಿದ್ದು, ಈ ಚುನಾವಣೆಗಳ ಬಗ್ಗೆಯೂ ಚರ್ಚೆ ನಡೆಸಲಾಯಿತು ಎಂದು ಹೇಳಿದರು.
ಎನ್‌ಡಿಎಯನ್ನು ತಳಮಟ್ಟದಲ್ಲಿ ಬಲಪಡಿಸಲು ಅಮಿತ್ ಶಾ ಅವರು ಸಲಹೆಗಳನ್ನು ನೀಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯು ಎನ್‌ಡಿಎಗೆ ಸವಾಲು ಎಂಬುದು ನಿಜ. ಏಕೆಂದರೆ ಬಿಜೆಪಿ ಮತ್ತು ಜೆಡಿಎಸ್‌ನಿಂದ ಹಲವು ನಾಯಕರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ತಳಮಟ್ಟದ ಕಾರ್ಯಕರ್ತರು ಈ ಸವಾಲನ್ನು ಯಶಸ್ವಿಯಾಗಿ ಎದುರಿಸುಲಿದ್ದಾರೆ. ಕೇಂದ್ರದ ನಾಯಕರೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿಟ್ಟಿನಿಂದ ಬಲವಾದ ಹೋರಾಟ ನಡೆಸುವಂತೆ ಸಲಹೆ ನೀಡಿದ್ದಾರೆಂದು ತಿಳಿಸಿದರು.