ಹೊಸದಿಗಂತ ಡಿಜಿಟಲ್ ಡೆಸ್ಕ್:
ಹವಾಮಾನ ವೈಪರೀತ್ಯದಿಂದಾಗಿ ಉತ್ತರಾಖಂಡದ ಶಾಸ್ತ್ರತಾಳದಲ್ಲಿ ಚಾರಣಕ್ಕೆಂದು ತೆರಳಿದ್ದ ರಾಜ್ಯದ 9 ಮಂದಿ ಮೃತಪಟ್ಟಿದ್ದಾರೆ. ಉಳಿದವರ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೃತಪಟ್ಟಿರುವವರ ಮೃತದೇಹಗಳನ್ನು ಕುಟುಂಬದವರಿಗೆ ತಲುಪಿಸುವ ಮತ್ತು ರಕ್ಷಿಸಲ್ಪಟ್ಟಿರುವ ಉಳಿದ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು. ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ 9 ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಈಗಾಗಲೇ ಸೇನಾ ಹೆಲಿಕಾಪ್ಟರ್ ಮೂಲಕ ಐವರ ಮೃತದೇಹಗಳನ್ನು ಉತ್ತರ ಕಾಶಿಗೆ ತರಲಾಗಿದೆ. ರಕ್ಷಣಾ ಕಾರ್ಯಾಚರಣೆಯ ಮೂಲಕ 11 ಜನರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.