ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶ ರಾಜ್ಯದ ಪ್ರತಾಪಗಢ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ. ಜಿಲ್ಲೆಯ ಲೀಲಾಪುರ ಪ್ರದೇಶದಲ್ಲಿ ಗ್ಯಾಸ್ ಟ್ಯಾಂಕರ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ. ಅದೇ ಅಪಘಾತದಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಪ್ರಯಾಗರಾಜ್‌ನ ಎಸ್‌ಆರ್‌ಎನ್ ಆಸ್ಪತ್ರೆಗೆ ರವಾನಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾದರು.
ಈ ದುರಂತದ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದರು. 26 ವರ್ಷದ ಆಟೋ ಚಾಲಕ ಸತೀಶ್ ಗೌತಮ್, ಜೆಟ್ವಾರಾ ಪೊಲೀಸ್ ಠಾಣೆ ವ್ಯಾಪ್ತಿಯ ಭೈರವಪುರ ನಿವಾಸಿಯಾಗಿದ್ದು, 15 ಪ್ರಯಾಣಿಕರನ್ನು ತನ್ನ ವಾಹನದಲ್ಲಿ ಮೋಹನ್‌ಗಂಜ್‌ಗೆ ಕರೆದೊಯ್ದಿದ್ದಾನೆ. ವಾರಣಾಸಿ-ಲಖನೌ ಹೆದ್ದಾರಿಯಲ್ಲಿ ಲೀಲಾಪುರ ಪ್ರದೇಶದ ವಿಕ್ರಮ್‌ಪುರ ತಿರುವಿನ ಬಳಿ ಎದುರಿಗೆ ಬರುತ್ತಿದ್ದ ಟ್ಯಾಂಕರ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದು ಹೆದ್ದಾರಿಯಲ್ಲಿ ಪಲ್ಟಿಯಾಗಿದೆ.
ಆಟೋದಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಇತರರನ್ನು ಪ್ರಯಾಗ್‌ರಾಜ್‌ನಲ್ಲಿರುವ ಎಸ್‌ಆರ್‌ಎನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆದರೆ, ಗಾಯಗೊಂಡಿದ್ದ ಆರು ಮಂದಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರಪ್ರಕಾಶ್ ಶ್ರೀವಾಸ್ತವ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಪಶ್ಚಿಮ) ರೋಹಿತ್ ಮಿಶ್ರಾ ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ. ಮೃತರಲ್ಲಿ ನಾಲ್ವರನ್ನು ಇಕ್ಬಾಲ್ ಬಹದ್ದೂರ್ ಸಿಂಗ್ (40), ಸತೀಶ್ ಕುಮಾರ್ (35), ವಿಮಲಾ (38) ಮತ್ತು ಸತೀಶ್ (40) ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಎಸ್ಪಿ ರೋಹಿತ್ ಮಿಶ್ರಾ ತಿಳಿಸಿದ್ದಾರೆ. ಈ ಘಟನೆಯಲ್ಲಿ ಸಾವನ್ನಪ್ಪಿದ ಕೆಲವರನ್ನು ಗುರುತಿಸುವ ಪ್ರಯತ್ನವನ್ನು ತೀವ್ರಗೊಳಿಸಲಾಗಿದೆ. ಎಲ್‌ಪಿಜಿ ಟ್ಯಾಂಕರ್ ರಾಯ್ ಬರೇಲಿಯಿಂದ ವಾರಣಾಸಿಗೆ ಹೋಗುತ್ತಿರುವುದಾಗಿ ತನಿಖೆಯಿಂದ ತಿಳಿದುಬಂದಿದೆ.