ಹೊಸ ದಿಗಂತ ವರದಿ, ಶಿವಮೊಗ್ಗ:
ರಾಷ್ಟ್ರೀಯ ಹೆದ್ದಾರಿ ಯೋಜನೆ ಕಾಮಗಾರಿಗಳಿಗೆ ಕರ್ನಾಟಕ ಲೋಕೋಪಯೋಗಿ ಇಲಾಖೆ ಸಂಪೂರ್ಣ ಕೈಜೋಡಿಸಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಗಳ ಸಹಯೋಗದಲ್ಲಿ ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕರ್ನಾಟಕಕ್ಕೆ ಇಂದು ಸುವರ್ಣ ಅಕ್ಷರದಲ್ಲಿ ಬರೆದಿಡುವ ದಿನ ಎಂದರೂ ತಪ್ಪಾಗಲಾರದು. ಬೆಳಗಾವಿಯಲ್ಲಿ ಬೆಳಿಗ್ಗೆ ಸುಮಾರು 7 ಸಾವಿರ ಕೋಟಿ ರೂ. ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನಂತರ ಸಂಜೆ ಶಿವಮೊಗ್ಗದಲ್ಲಿ ಸುಮಾರು 6,200 ಕೋಟಿ ರೂ.ಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಾಗುತ್ತಿದೆ ಎಂದರು.
ಗಡ್ಕರಿ ಅವರು ಪಕ್ಷಾತೀತವಾಗಿ ಕೆಲಸ ಮಾಡುವ ವ್ಯಕ್ತಿ. ಕೇಂದ್ರ ಮತ್ತು ರಾಜ್ಯದಲ್ಲಿ ಬೇರೆ ಬೇರೆ ಪಕ್ಷಗಳ ಸರ್ಕಾರ ಇದ್ದಾಗಲೂ ಪಕ್ಷಪಾತ ಮಾಡದೇ ಅಭಿವೃದ್ಧಿ ಕಡೆಗೆ ಗಮನ ಹರಿಸುತ್ತಾರೆ. ನಾನು ಸಚಿವನಾನದ ಕಳೆದ 09 ತಿಂಗಳಲ್ಲಿ 05 ಬಾರಿ ಭೇಟಿ ಮಾಡಿದ್ದೇನೆ. ಕಳೆದ 12 ವರ್ಷಗಳಿಂದ ಬಗೆಹರಿಯದೇ ಇದ್ದ ಸಮಸ್ಯೆಗಳನ್ನು ಅವರು ಪರಿಹರಿಸಿಕೊಟ್ಟಿದ್ದಾರೆ ಎಂದರು.
ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ, ಬಳ್ಳಾರಿ ಸಂಸದ ದೇವೇಂದ್ರಪ್ಪ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳ್ಳಿ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಎಸ್.ರುದ್ರೇಗೌಡ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಎಸ್ಪಿ ಮಿಥುನ್‌ಕುಮಾರ್, ಜಿಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ಇನ್ನಿತರರು ಇದ್ದರು.