ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ರಾಜಧಾನಿ ಪಾಟ್ನಾದಲ್ಲಿ ಬುಧವಾರ ನಡೆದ ಜೆಡಿಯು ಶಾಸಕಾಂಗ ಪಕ್ಷದ ಸಭೆಯಲ್ಲಿ ಹೊಸದಾಗಿ ಆಯ್ಕೆಯಾದ ಶಾಸಕರು, ಜೆಡಿ(ಯು)ಮುಖ್ಯಸ್ಥ ನಿತೀಶ್ ಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದರು.
ಎನ್‌ಡಿಎ ಸಭೆಗೂ ಮುಂಚಿತವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸಚಿವ ಶ್ರಾವಣ್ ಕುಮಾರ್ ಅವರು ಹೇಳಿದ್ದಾರೆ. ನಂತರ ನಿತೀಶ್ ಕುಮಾರ್ ಅವರನ್ನು ಎನ್ ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡುವ ನಿರೀಕ್ಷೆಯಿದೆ.
ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದ್ದು, ಗುರುವಾರ ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಿತೀಶ್ ಕುಮಾರ್ ಅವರು ದಾಖಲೆಯ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

