ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಂಸ್ಕೃತಿಕ ನಗರಿಯ ಹೃದಯಭಾಗವಾದ ಮೈಸೂರು ಅರಮನೆಯ ಮುಂಭಾಗದಲ್ಲಿ ಇಂದು ಮಧ್ಯಾಹ್ನ ಭೀಕರ ದುರಂತವೊಂದು ಸಂಭವಿಸಿದೆ. ಬಲೂನ್‌ಗಳಿಗೆ ನೈಟ್ರೋಜನ್ ಅನಿಲ ತುಂಬುವ ಸಿಲಿಂಡರ್ ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ, ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅರಮನೆಯ ಪ್ರಮುಖ ಪ್ರವೇಶ ದ್ವಾರಗಳಲ್ಲಿ ಒಂದಾದ ಜಯ ಮಾರ್ತಾಂಡ ಗೇಟ್ ಬಳಿ ಈ ಘಟನೆ ನಡೆದಿದೆ. ಪ್ರವಾಸಿಗರನ್ನು ಆಕರ್ಷಿಸಲು ಬಲೂನ್ ಮಾರಾಟ ಮಾಡುತ್ತಿದ್ದ ವ್ಯಕ್ತಿ, ಸಿಲಿಂಡರ್ ಮೂಲಕ ಗ್ಯಾಸ್ ತುಂಬಿಸುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಮೃತ ವ್ಯಕ್ತಿಯ ದೇಹದ ಭಾಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಈ ಅವಘಡದಲ್ಲಿ ಗಾಯಗೊಂಡಿರುವ ಇತರ ಮೂವರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅರಮನೆಯ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

