ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಸಾಮಾಜಿಕ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರೂಪಿಸಿರುವ ನಿಯಮಾವಳಿಗಳು ಕೇವಲ ಮಾರ್ಗದರ್ಶಿ ಸೂತ್ರಗಳಾಗಿವೆ ಮತ್ತು ಡಿಜಿಟಲ್ ವೇದಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಆರ್.ಎಸ್. ರೆಡ್ಡಿ ಅವರನ್ನೊಳಗೊಂಡ ಪೀಠವು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.
ವೆಬ್ ಸರಣಿ ‘ತಾಂಡವ್’ ವಿರುದ್ಧ ದಾಖಲಿಸಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ಅಮೆಜಾನ್ ಪ್ರೈಮ್ ವಿಡಿಯೊದ ಭಾರತದ ಮುಖ್ಯಸ್ಥ ಅಪರ್ಣಾ ಪುರೋಹಿತ್ ಅವರನ್ನು ಬಂಧಿಸದಂತೆ ನ್ಯಾಯಾಲಯ ರಕ್ಷಣೆಯನ್ನು ಈ ವೇಳೆ ನೀಡಿತು. ಆದರೆ ಪೊಲೀಸರ ತನಿಖೆಗೆ ಅಪರ್ಣಾ ಪುರೋಹಿತ್ ಸಂಪೂರ್ಣ ಸಹಕಾರ ನೀಡಬೇಕು ಎಂದು ಸ್ಪಷ್ಟಪಡಿಸಿತು.
ವಕೀಲ ಶಶಾಂಕ್ ಶೇಖರ್ ಮತ್ತು ಅಪೂರ್ವಾ ಅರ್ಹಿತಾ ಅವರುಗಳು ಓಟಿಟಿ ವೇದಿಕೆಗಳ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಬೇಕೆಂದು ಅರ್ಜಿ ಸಲ್ಲಿಸಿದ್ದರು. ಕಳೆದ ವರ್ಷ ಅಕ್ಟೋಬರ್ 15ಕ್ಕೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಇಂಟರ್ನೆಟ್ ಅಂಡ್ ಮೊಬೈಲ್ ಅಸೋಸಿಯೇಷನ್ ಆಫ್ ಇಂಡಿಯಾಗೆ ನೊಟೀಸ್ ನೀಡಿತ್ತು.
ನಂತರ ನಡೆದ ವಿಚಾರಣೆಯಲ್ಲಿ ‘ಓಟಿಟಿ ವೇದಿಕೆಗಳ ಮೇಲೆ ಕೆಲವು ನಿರ್ಬಂಧಗಳನ್ನು ವಿಧಿಸಲು ಯೋಚಿಸುತ್ತಿದ್ದೇವೆ’ ಎಂದು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೋರ್ಟ್ನಲ್ಲಿ ವಾದ ಮಂಡಿಸಿದ ಹೆಚ್ಚುವರಿ ಸಾಲಿಟಟರ್ ಜನರಲ್ ಸಂಜಯ್ ಜೈನ್ ಸುಪ್ರೀಂ ಕೋರ್ಟ್ಗೆ ತಿಳಿಸಿದ್ದರು. ಓಟಿಟಿ ವೇದಿಕೆಗಳ ಕುರಿತು ಕೇಂದ್ರ ಸರ್ಕಾರದ ನಿಲುವು ತಿಳಿಸಲು ಸೂಚಿಸಿದ್ದ ಸುಪ್ರೀಂ ಕೋರ್ಟ್ನ ಮುಖ್ಯ ನಾಯಮೂರ್ತಿ ಎಸ್.ಎ.ಬೋಬ್ಡೆ, ನ್ಯಾಯಮೂರ್ತಿಗಳಾದ ಎ. ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಹ್ಮಣ್ಯನ್ ಅವರಿದ್ದ ತ್ರಿಸದಸ್ಯ ಪೀಠಕ್ಕೆ ಕೇಂದ್ರ ಸರ್ಕಾರ ತನ್ನ ನಿಲುವು ತಿಳಿಸಿತ್ತು.