ಹೊಸದಿಗಂತ ವರದಿ ತುಮಕೂರು:
ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯ ಗೇಟ್ ಸಮೀಪ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಬುಧವಾರ ಬೆಳಿಗ್ಗೆ ಬೆಂಗಳೂರು – ಶಿವಮೊಗ್ಗ ಚತುಷ್ಪಥ ಹೆದ್ದಾರಿ 73ರಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ಜರುಗಿದೆ.
ಕಳ್ಳಿಪಾಳ್ಯ ಗೇಟ್‌ನಿಂದ ಪ್ರತಿದಿನ ಹತ್ತಾರು ಗ್ರಾಮಗಳ ವಿದ್ಯಾರ್ಥಿಗಳು ಗುಬ್ಬಿ ಹಾಗೂ ತುಮಕೂರು ನಗರಗಳಿಗೆ ವಿದ್ಯಾಭ್ಯಾಸಕ್ಕಾಗಿ ಪ್ರಯಾಣಿಸುತ್ತಾರೆ. ಆದರೆ ಈ ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳು ನಿಲ್ದಾಣದಲ್ಲಿ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದೆ ವೇಗವಾಗಿ ತೆರಳುವುದು, ನಿಲ್ಲುವ ಕೆಲವೇ ಬಸ್‌ಗಳಲ್ಲಿ ಅತಿಯಾದ ಜನಸಂದಣಿ ಇರುವುದರಿಂದ ವಿದ್ಯಾರ್ಥಿಗಳು ಪ್ರತಿನಿತ್ಯ ಶಾಲಾ-ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ತಲುಪಲು ಪರದಾಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ.
ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಬೇಸತ್ತ ವಿದ್ಯಾರ್ಥಿಗಳು ಬುಧವಾರ ಬೆಳಿಗ್ಗೆ ಬೆಂಗಳೂರು–ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
ವಿಷಯ ತಿಳಿದ ಕೂಡಲೇ ಜೆಡಿಎಸ್ ಮುಖಂಡ ಕಳ್ಳಿಪಾಳ್ಯ ಲೋಕೇಶ್ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸಿದರು. ನಂತರ ಗುಬ್ಬಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಮಾಹಿತಿ ಪಡೆದ ಗುಬ್ಬಿ ಸಿಪಿಐ ರಾಘವೇಂದ್ರ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕಾಗಮಿಸಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿ ಮನವೊಲಿಸಿತು. ಬಳಿಕ ರಸ್ತೆ ತಡೆ ತೆರವುಗೊಳಿಸಿ ಹೆದ್ದಾರಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು.



