ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಪ್ರಸ್ತಾಪ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಸ್ಪಷ್ಟಪಡಿಸಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಅನೇಕರು ಕೇಳಿದ್ದಾರೆ. ಉಪಚುನಾವಣೆ ಬಳಿಕ ನೋಡೋಣ ಎಂದಿದ್ದೇನೆ. ಅದನ್ನೇ ಸಂಪುಟ ಪುನಾರಚನೆ ಎಂದು ಬಿಂಬಿಸಬೇಡಿ ಎಂದು ಹೇಳಿದರು.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ. ಅವ್ಯವಹಾರದ ಆರೋಪದಲ್ಲಿ ಜೈಲುಪಾಲಾಗಿ ಬಿಡುಗಡೆಯಾಗಿರುವ ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ನೀಡುವ ಬಗ್ಗೆ ಸಿದ್ದರಾಮಯ್ಯ ಮಂಗಳವಾರ ಸುಳಿವು ನೀಡಿದ್ದರು. ಇದರ ಬೆನ್ನಲ್ಲೇ ಸಂಪುಟ ಪುನಾರಚನೆ ವದಂತಿ ಹಬ್ಬಿತ್ತು. ಇದೀಗ ಸಿದ್ದರಾಮಯ್ಯ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.