ಕೇಂದ್ರ – ರಾಜ್ಯ ಸರ್ಕಾರದ ನಡುವೆ ಸ್ಪರ್ಧೆ ಬೇಡ: ಸುಪ್ರೀಂಕೋರ್ಟ್ ಸಲಹೆ

 

ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯದಿಂದ ಬರ ಪರಿಹಾರಕ್ಕೆ ಕೇಂದ್ರಕ್ಕೆ ಸಲ್ಲಿಕೆ ಮಾಡಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದಾರೆ.

ಈ ವೇಳೆ ವಿವಿಧ ರಾಜ್ಯಗಳು ನ್ಯಾಯಾಲಯವನ್ನು ಸಂಪರ್ಕಿಸುವ ಬೆಳವಣಿಗೆ ಹೆಚ್ಚುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಈ ರೀತಿಯ ಯಾವುದೇ ಪೈಪೋಟಿ ಬೇಡ ಎಂದು ಸಲಹೆ ನೀಡಿದೆ.

ಬರ ಪರಿಹಾರ ನಿಧಿ (Drought Relief Funds) ಬಿಡುಗಡೆಗೆ ನಿರ್ದೇಶನ ಕೋರಿ ಕರ್ನಾಟಕ ಸರ್ಕಾರ (Government of Karnataka) ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ (Central Government) ಸೂಚಿಸಿದೆ.

ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಬಿ.ಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ನೇತೃತ್ವದ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಸ್ಪರ್ಧೆ ಬೇಡ ಎಂದು ಪೀಠ ಕಿವಿಮಾತು ಹೇಳಿದೆ.

ಕೇಂದ್ರ ಸರ್ಕಾರದ ಪರ ವಾದಿಸಿದ ಸಾಲಿಸಿಟರ್ ಜನರಲ್ (ಎಸ್‍ಜಿ) ತುಷಾರ್ ಮೆಹ್ತಾ, ಆರ್ಟಿಕಲ್ 32ರ ಅಡಿಯಲ್ಲಿ ಅರ್ಜಿ ಸಲ್ಲಿಸುವ ಬದಲು ರಾಜ್ಯ ಸರ್ಕಾರ ಕೇಂದ್ರದೊಂದಿಗೆ ಸಂವಹನ ನಡೆಸಬಹುದಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಪಿಲ್ ಸಿಬಲ್ ನೋಟಿಸ್ ನೀಡುವಂತೆ ಮನವಿ ಮಾಡಿದರು. ಮೆಹ್ತಾ ಮಧ್ಯಪ್ರವೇಶಿಸಿ ನೋಟಿಸ್ ನೀಡಬೇಡಿ, ಅನಗತ್ಯ ಸುದ್ದಿಯಾಗುತ್ತದೆ ಎಂದು ಮನವಿ ಮಾಡಿಕೊಂಡರು.

ಎರಡು ವಾರದಲ್ಲಿ ಸರ್ಕಾರದೊಂದಿಗೆ ಚರ್ಚಿಸಿ ಪ್ರತಿಕ್ರಿಯೆ ನೀಡಿ ಎಂದು ಸಾಲಿಸಿಟಿರ್ ಜನರಲ್ ತುಷಾರ್ ಮೆಹ್ತಾ ಮತ್ತು ಈ ವಿಷಯದಲ್ಲಿ ಹಾಜರಾಗಿದ್ದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರಿಗೆ ಸೂಚಿಸಿತು.

ಅರ್ಜಿ ವಿಚಾರಣೆಯನ್ನು ನೇರವಾಗಿ ವೀಕ್ಷಿಸಲು ತೆರಳಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಕಲಾಪ ಮುಗಿದ ನಂತರ ಹೊರಗೆ ಬಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ, ಕರ್ನಾಟಕದಲ್ಲಿ ಬರಗಾಲ ಆವರಿಸಿದ್ದು, ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ ಅರ್ಜಿ ಸಲ್ಲಿಸಿ 7 ತಿಂಗಳು ಕಳೆದರೂ ಪರಿಹಾರ ಕೊಡದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದೆವು. ಇಂದು ಅದರ ಬಗ್ಗೆ ವಿಚಾರಣೆ ನಡೆಸಿದಾಗ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರು ಕೇಂದ್ರ ಸರ್ಕಾರವು 2 ವಾರದೊಳಗೆ ಕರ್ನಾಟಕದ ಅರ್ಜಿಗೆ ಯಾವ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂಬುದನ್ನು ತಿಳಿಸಬೇಕು ಎಂದು ಸೂಚಿಸಲಾಗಿದೆ ಎಂದರು

ಎರಡು ವಾರದ ಒಳಗಡೆ ಸರ್ಕಾರದ ತೀರ್ಮಾನವನ್ನು ಸುಪ್ರೀಂ ಕೋರ್ಟ್‌ಗೆ ತಿಳಿಸಬೇಕು, ಒಕ್ಕೂಟ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ಕೆಲಸ ಮಾಡಬೇಕು. ರಾಜ್ಯ ಸರ್ಕಾರಗಳು ಕೇಂದ್ರದಿಂದ ರೊಟೀನ್ ಆಗಿ ಆಗುವ ಕೆಲಸದ ಬಗ್ಗೆ ತಕರಾರು ಅರ್ಜಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ವಾದಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ಗೆಲವು ಸಿಕ್ಕಿದೆ. ಮಾನ್ಯ ನ್ಯಾಯ ಮೂರ್ತಿಗಳೇ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ಇಷ್ಟರೊಳಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಿತ್ತು ಎಂದು ಸೂಚಿಸಿದ್ದಾರೆ. ಒಟ್ಟಾರೆ, ಗೌರವಾನ್ವಿತ ಸುಪ್ರೀಂ ಕೋರ್ಟ್‌ಗೆ ನಮ್ಮ ರಾಜ್ಯದ ಪರವಾಗಿ ಧನ್ಯವಾದಗಳನ್ನು ತಿಳಿಸುತ್ತೇನೆ. ಈಗಲಾದರೂ ಕೇಂದ್ರ ಸರ್ಕಾರ ಒಂದು ಸೂಕ್ತ ತೀರ್ಮಾನ ತೆಗೆದುಕೊಂಡು ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡಲಿದೆ ಎಂಬ ಭರವಸೆ ಇಟ್ಟುಕೊಂಡಿದ್ದೇವೆ. ಈ ನಂತರ ಕೂಡಲೇ ನಾವು ರಾಜ್ಯದ ರೈತರಿಗೆ ಬರ ಪರಿಹಾರವನ್ನು ನೀಡಲು ಸಾಧ್ಯವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!