ಆದಿವಾಸಿ, ಬುಡಕಟ್ಟು, ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ವಿಚಾರದಲ್ಲಿ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆದಿವಾಸಿ, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ನಿಯೋಗದ ಮುಖಂಡರು ಏಕರೂಪ ನಾಗರಿಕ ಸಂಹಿತೆ ಜಾರಿಯಿಂದ ಮುಸ್ಲಿಮರು, ಆದಿವಾಸಿ, ಬುಡಕಟ್ಟು ಹಾಗೂ ಇನ್ನಿತರೆ ಅಲ್ಪಸಂಖ್ಯಾತ ಹಕ್ಕುಗಳಿಗೆ, ಕಾನೂನಿಗೆ ಧಕ್ಕೆಯಾಗುವ ಕುರಿತು ಆತಂಕ ವ್ಯಕ್ತಪಡಿಸಿದರು.

ಏಕರೂಪ ನಾಗರಿಕ ಸಂಹಿತೆ ಕುರಿತು ಪರಿಶೀಲಿಸುವಂತೆ ಪ್ರಸಕ್ತ ಕಾನೂನು ಆಯೋಗಕ್ಕೆ ಕೇಂದ್ರ ಸರ್ಕಾರ ತಿಳಿಸಿದೆ. ಅದರಂತೆ ಕಾನೂನು ಆಯೋಗವು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ. ಹೀಗಾಗಿ ಬೋರ್ಡ್ನ ವತಿಯಿಂದ ಏಕರೂಪ ನಾಗರಿಕ ಸಂಹಿತೆ ಜಾರಿ ವಿರೋಧಿಸಿ ಒಂದು ಕೋಟಿಗೂ ಹೆಚ್ಚು ಸಹಿ ಸಂಗ್ರಹ ಮಾಡಿ ಕಾನೂನು ಆಯೋಗಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಏಕರೂಪ ನಾಗರಿಕ ಸಂಹಿತೆಯ ಕರಡು ಪ್ರಕಟವಾದ ನಂತರ ಪರಿಶೀಲಿಸಿ ಪ್ರತಿಕ್ರಿಯಿಸಲಾಗುವುದು.

ಅಲ್ಪಸಂಖ್ಯಾತರ ಹಕ್ಕುಗಳ ದಮನಕ್ಕೆ ತಮ್ಮ ಸರ್ಕಾರ ಎಂದಿಗೂ ಅವಕಾಶ ನೀಡದು. ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅನಗತ್ಯ ವಿವಾದ ಸೃಷ್ಟಿಸುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಮಾಜಿ ಉಪಾಧ್ಯಕ್ಷ ಕೆ. ರೆಹಮಾನ್ ಖಾನ್, ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಝೀರ್ ಅಹ್ಮದ್, ಮೌಲಾನಾ ಸೈಯದ್ ಮುಸ್ತಫಾ ರಫಾಯಿ ನದ್ವಿ, ಮೌಲಾನಾ ಸೈಯದ್ ಮುಹಮ್ಮದ್ ತನ್ವೀರ್ ಹಶ್ಮಿ, ಮೌಲಾನಾ ಶಬೀರ್ ಅಹ್ಮದ್ ಹುಸೈನಿ ನದ್ವಿ, ಮುಫ್ತಿ ಇಫ್ತಿಕಾರ್ ಅಹ್ಮದ್ ಕಾಸ್ಮಿ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!