ಜಗತ್ತಿನ ಯಾವುದೇ ರಾಷ್ಟ್ರ ಭಾರತದಷ್ಟು ಉತ್ತಮ ಸಂವಿಧಾನ ಹೊಂದಿಲ್ಲ: ಸಚಿವ ಸುನಿಲ್ ಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರು ರಚಿಸಿದಂತಹ ಸಂವಿಧಾನದಿಂದಾಗಿ ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಗಟ್ಟಿಯಾಗಿ ನಿಂತಿದೆ. ಭಾರತ ಸ್ವಾತಂತ್ರ್ಯಗೊಂಡು 75 ವರ್ಷಗಳಾದರೂ ಜಗತ್ತಿನ ಯಾವುದೇ ರಾಷ್ಟ್ರ ಇಷ್ಟು ಒಳ್ಳೆಯ ಸಂವಿಧಾನವನ್ನು ಹೊಂದಲು ಸಾಧ್ಯವಾಗಿಲ್ಲ. ಸಂವಿಧಾನ ಅಂದರೆ ಹೇಗಿರಬೇಕು ಎಂಬುದನ್ನು ಇತರೆ ರಾಷ್ಟ್ರಗಳು ಭಾರತದತ್ತ ತಿರುಗಿ ನೋಡುತ್ತಿವೆ. ಇದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಅಂಬೇಡ್ಕರ್‌ರವರು ನೀಡಿದ ಈ ಸಂವಿಧಾನವನ್ನು ಇನ್ನಷ್ಟು ಶ್ರೀಮಂತಗೊಳಿಸುವುದರೊಂದಿಗೆ ಅವರ ಆದರ್ಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಉರ್ವ ಸ್ಟೋರ್‌ನಲ್ಲಿರುವ ಅಂಬೇಡ್ಕರ್ ಭವನದಲ್ಲಿ ಗುರುವಾರ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್‌ರವರ 131ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದ ಸಂವಿಧಾನ ಜಗತ್ತಿಗೇ ಮಾದರಿಯಾಗಿ ನಿಂತಿದೆ. ಇದಕ್ಕೆ ಮುಖ್ಯ ಕಾರಣ ಡಾ.ಬಿ.ಆರ್.ಅಂಬೇಡ್ಕರ್ ಅವರು. ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆಯಾಗದಂತೆ ಅನುಕೂಲಕ್ಕೆ ತಕ್ಕಂತೆ ಕೆಲವೊಂದು ಮಾರ್ಪಾಡುಗಳನ್ನು ಮಾಡುತ್ತ ಪ್ರಜಾಪ್ರಭುತ್ವವನ್ನು ಇನ್ನಷ್ಟು ಗಟ್ಟಿಗೊಳಿಸುವ ಕಾರ್ಯವನ್ನು ಎಲ್ಲಾ ಪ್ರಧಾನಿಗಳು ಮಾಡುತ್ತಾ ಬಂದಿದ್ದಾರೆ. ಪ್ರಧಾನಿ ಮೋದಿಯವರು ಕೂಡ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕಾರ್ಯವನ್ನು ಮಾಡಿದ್ದಾರೆ. ಅಂಬೇಡ್ಕರ್‌ರವರ ಪಂಚ ತೀರ್ಥಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಮಹತ್ತರ ಕಾರ್ಯವನ್ನು ಪ್ರಧಾನಿ ಮೋದಿ ನೇತೃತ್ವದ ಸರಕಾರ ಮಾಡಿರುವುದು ಹೆಮ್ಮೆ ಪಡಬೇಕಾದ ವಿಷಯ ಎಂದು ಸುನಿಲ್ ಕುಮಾರ್ ಹೇಳಿದರು.
ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಅಂಬೇಡ್ಕರ್‌ರವರ ಹುಟ್ಟೂರು, ಶಿಕ್ಷಣ ಪಡೆದ ಸ್ಥಳ, ಬೌದ್ಧ ಧರ್ಮ ಸ್ವೀಕಾರ ಮಾಡಿದ ಸ್ಥಳ, ಮರಣ ಹೊಂದಿದ ಸ್ಥಳ ಇವ್ಯಾವುದೂ ಅಭಿವೃದ್ಧಿ ಕಂಡಿರಲಿಲ್ಲ. ಅಂಬೇಡ್ಕರ್‌ರವರ ಜನ್ಮಭೂಮಿಯನ್ನು ತೀರ್ಥಕ್ಷೇತ್ರವಾಗಿ ಮಾರ್ಪಡಿಸಿರುವ ಮೋದಿ ಅಂಬೇಡ್ಕರ್‌ರವರ ದೆಹಲಿಯ ಮನೆಯನ್ನು ಮ್ಯೂಸಿಯಂ ಆಗಿ ಬದಲಾಯಿಸಿದ್ದಾರೆ. ನಾಗಪುರದಲ್ಲಿ ಬೌದ್ಧ ಸ್ವೀಕಾರ ಮಾಡಿದ ಸ್ಥಳವನ್ನು ಅಭಿವೃದ್ಧಿ ಪಡಿಸುವ ಮೂಲಕ ಸಂವಿಧಾನ ಶಿಲ್ಪಿಗೆ ನಿಜವಾದ ಗೌರವ ನೀಡುವ ಕೆಲಸ ಮಹತ್ ಕಾರ್ಯಗಳ ಮೂಲಕ ಬಿಜೆಪಿ ಸರಕಾರ ಮಾಡಿದೆ. ಇದು ಹೆಮ್ಮೆಯ ವಿಷಯ ಎಂದರು.
ಮಂಗಳೂರಿನಲ್ಲಿ 15 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣವಾಗಿರುವುದರಿಂದ ಈ ಭಾಗದ ಎಲ್ಲಾ ಚಟುವಟಿಕೆಗಳಿಗೆ ಕೇಂದ್ರವಾಗಿ ಮಾರ್ಪಟ್ಟಿದೆ. ಈ ವರ್ಷದ ಬಜೆಟ್‌ನಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಅಂಬೇಡ್ಕರ್‌ರವರ ಆದರ್ಶವನ್ನು ಮೈಗೂಡಿಸಿಕೊಳ್ಳುವುದರೊಂದಿಗೆ ಅವರ ಕಾರ್ಯವನ್ನು ಪ್ರತಿಯೊಬ್ಬರೂ ಮುಂದುವರಿಸಬೇಕು. ಭಾರತದ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆ ಇನ್ನಷ್ಟು ಶ್ರೀಮಂತವಾಗಬೇಕು ಎಂದು ಸುನಿಲ್ ಕುಮಾರ್ ಹೇಳಿದರು.
ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್, ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿ.ಪಂ. ಸಿಇಒ ಡಾ.ಕುಮಾರ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!