ಹೊಸದಿಗಂತ ಡಿಜಿಟಲ್ ಡೆಸ್ಕ್:
ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯದ ಹಿನ್ನೆಲೆಯಲ್ಲಿ, ಉತ್ಖನನ ನಡೆಯುವ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ. ಜೊತೆಗೆ ಆ ಭಾಗದಲ್ಲಿ ವೀಡಿಯೊ ಚಿತ್ರೀಕರಣ ಹಾಗೂ ಫೋಟೋಗ್ರಫಿಗೂ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಲಾಗಿದೆ.
ಲಕ್ಕುಂಡಿ ಜಿಲ್ಲಾಧಿಕಾರಿ ಈ ಆದೇಶ ಜಾರಿಗೊಳಿಸಿದ್ದು, ಪುರಾತತ್ವ ಇಲಾಖೆಯ ಶಿಫಾರಸ್ಸಿನ ಮೇರೆಗೆ ಉತ್ಖನನ ಜಾಗವನ್ನು ‘ಸೂಕ್ಷ್ಮ ಪ್ರದೇಶ’ ಎಂದು ಘೋಷಿಸಲಾಗಿದೆ. ಉತ್ಖನನ ಕಾರ್ಯಕ್ಕೆ ಯಾವುದೇ ರೀತಿಯ ಅಡ್ಡಿ ಉಂಟಾಗಬಾರದು ಹಾಗೂ ಪತ್ತೆಯಾಗುವ ಅವಶೇಷಗಳ ಭದ್ರತೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಉತ್ಖನನ ಕಾರ್ಯ ನಡೆಯುತ್ತಿದ್ದು, ದೇವಾಲಯದ ಸುತ್ತಲಿನ 10 ಮೀಟರ್ ವ್ಯಾಪ್ತಿಯಲ್ಲಿ ಹಂತ ಹಂತವಾಗಿ ಅಗೆತ ಕಾರ್ಯ ಮುಂದುವರಿಯುತ್ತಿದೆ. ಈಗಾಗಲೇ ಅಗತ್ಯವಿರುವ ಸಾವಿರಾರು ಚದರ ಮೀಟರ್ ಜಾಗವನ್ನು ಅಧಿಕಾರಿಗಳು ಸ್ವಾಧೀನಪಡಿಸಿಕೊಂಡಿದ್ದಾರೆ.
ಉತ್ಖನನದಿಂದ ಮಹತ್ವದ ಐತಿಹಾಸಿಕ ಅವಶೇಷಗಳು ಸಿಕ್ಕಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದು, ಗ್ರಾಮವನ್ನು ಸ್ಥಳಾಂತರಿಸುವ ಬಗ್ಗೆ ಸದ್ಯ ಯಾವುದೇ ತೀರ್ಮಾನ ಇಲ್ಲ ಎಂದು ತಿಳಿಸಿದ್ದಾರೆ.


