ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣೇಶ ವಿಸರ್ಜನೆ ವೇಳೆ ನಡೆದ ಹಿಂಸಾಚಾರ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.
ಘಟನೆ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಚೆಲುವರಾಯಸ್ವಾಮಿ, ‘ನಮ್ಮ ನಾಗಮಂಗಲ ಶಾಂತಿ, ಸೌಹಾರ್ದತೆಯ ನೆಲೆ. ಇಲ್ಲಿ ಅಶಾಂತಿ ಮೂಡಿಸುವ ಯಾವುದೇ ಪ್ರಯತ್ನವನ್ನು ನಾವು ಸಹಿಸುವುದಿಲ್ಲ. ತಪ್ಪು ಮಾಡಿರುವವರ ವಿರುದ್ಧ ಕ್ರಮ ಆಗುತ್ತದೆ. ಸಾರ್ವಜನಿಕರು ಯಾವುದೇ ವದಂತಿ ಪ್ರೇರಣೆಗಳಿಗೆ ಕಿವಿಗೊಡದೆ ಶಾಂತಿ ಮರುಸ್ಥಾಪನೆಗೆ ಸಹಕರಿಸಬೇಕೆಂದು ಕೋರುತ್ತೇನೆ.
ಘಟನೆ ತಿಳಿದ ತಕ್ಷಣವೇ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಮಾತನಾಡಿ, ವರದಿ ಪಡೆದಿದ್ದೇನೆ. ನಾವು ಯಾವುದೇ ಸಮುದಾಯ ಅಥವಾ ಜಾತಿಗೆ ಯಾವುದೇ ಪ್ರಾಮುಖ್ಯತೆಯನ್ನು ನೀಡುವುದಿಲ್ಲ, ಅದು ಹಿಂದೂ ಅಥವಾ ಮುಸ್ಲಿಂ ಅಥವಾ ಇನ್ಯಾರೇ ಆಗಿರಲಿ.. ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವವರು, ಸಮುದಾಯಗಳ ನಡುವೆ ಬಿರುಕು ಸೃಷ್ಟಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಎಲ್ಲಾ ತಪ್ಪಿತಸ್ಥರ ಬಂಧನಕ್ಕೆ ಸೂಚಿಸಿದ್ದು ಶಾಂತಿ ಮರುಸ್ಥಾಪನೆಗೆ ಅಗತ್ಯವಿರುವ ತುರ್ತು ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ ಎಂದರು.