ಹೊಸ ದಿಗಂತ ವರದಿ, ಶಿವಮೊಗ್ಗ :
ರಾಜ್ಯದ ಕಾಂಗ್ರೆಸ್ ಸರ್ಕಾರ ಕೋವಿಡ್ ವೇಳೆ ನಡೆದಿರುವ ವಸ್ತುಗಳ ಖರೀದಿ ಬಗ್ಗೆ ತನಿಖೆಗೆ ಎಸ್‌ಐಟಿ ರಚನೆ ಮಾಡಿದರೆ ಅದನ್ನು ಕಾನೂನು ಚೌಕಟ್ಟಿನಲ್ಲಿ ಎದುರಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ನಗರದಲ್ಲಿ ಶನಿವಾರ ಮಾಧ್ಯಮ ರವರೊಂದಿಗೆ ಮಾತನಾಡಿದ ಅವರು, ಎಸ್‌ಐಟಿ ಕುರಿತು ಚಿಂತೆ ಮಾಡುವ ಅಗತ್ಯವಿಲ್ಲ. ಅದು ದುರುದ್ದೇಶದಿಂದ ಕೂಡಿದ ಆರೋಪವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೋವಿಡ್ ಸಂದ‘ರ್ಭದಲ್ಲಿ ಜನರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದರು. ಬದುಕಿ ಉಳಿಯುವುದೇ ಕಷ್ಟ ಎನ್ನುವ ಸಂದರ್ಭದಲ್ಲಿ ಅದಾಗಿತ್ತು. ಯಾವುದೇ ಜೀವರಕ್ಷಕ ಔಷಧ ಎಲ್ಲಿಯೂ ಸಿಗುವ ಸಾಧ್ಯತೆಯೇ ಇರಲಿಲ್ಲ. ಹೊರಗಿನಿಂದ ಔಷಧ ತಂದು ಜನರ ಜೀವ ಉಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಇಷ್ಟು ವರ್ಷದ ನಂತರ ಇದು ಒಂದು ಹಗರಣ ಅಂತ ಗೊಂದಲ ಉಂಟು ಮಾಡುವ ಪ್ರಯತ್ನವನ್ನು ರಾಜ್ಯದ ಮುಖ್ಯಮಂತ್ರಿ ಮಾಡುತ್ತಿದ್ದಾರೆ. ಇದಕ್ಕೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಪ್ರಾಮಾಣಿಕವಾಗಿ ನಾವು ನಮ್ಮ ಕೆಲಸ ಮಾಡಿದ್ದೇವೆ. ಜನ ಮೆಚ್ಚುವಂತಹ ಕೆಲಸ ಮಾಡಿದ್ದೇವೆ ಎಂದು ಹೇಳಿದರು.