ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ಮದ್ರಾಸ್ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ.
ಚೆನ್ನೈನಲ್ಲಿ ಪ್ರತಿಭಟನೆಗೆ ಪೊಲೀಸರ ಅನುಮತಿ ನಿರಾಕರಣೆ ಕುರಿತು ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭ , ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜಕೀಯಗೊಳಿಸಲಾಗುತ್ತಿದೆ. ಮಹಿಳೆಯರ ಸುರಕ್ಷತೆಯ ಬಗ್ಗೆ ನಿಜವಾದ ಕಾಳಜಿ ಯಾರಿಗೂ ಇಲ್ಲ ಎಂದು ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಡಿ.23 ರಂದು ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗದ (NCW) ನಿವೃತ್ತ ಐಪಿಎಸ್ ಅಧಿಕಾರಿ ಪ್ರವೀಣ್ ದೀಕ್ಷಿತ್ ಸೇರಿದಂತೆ ಇಬ್ಬರು ಸದಸ್ಯರ ಸತ್ಯಶೋಧನಾ ಸಮಿತಿಯನ್ನು ರಚಿಸಿದೆ. ಸಮಿತಿಯು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ, ಸಂತ್ರಸ್ತೆ, ಆಕೆಯ ಕುಟುಂಬ, ಅಧಿಕಾರಿಗಳು ಮತ್ತು ಎನ್‌ಜಿಒಗಳನ್ನು ಭೇಟಿ ಮಾಡಿ ಮಾಹಿತಿ ಕಲೆಹಾಕಿದೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ NWS, ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ಭದ್ರತೆಯನ್ನು ಮೌಲ್ಯಮಾಪನ ಮಾಡಲಾಗಿದೆ. ಅಲ್ಲದೇ ಶಿಫಾರಸುಗಳೊಂದಿಗೆ ವಿವರವಾದ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದು ಬರೆದುಕೊಂಡಿದೆ.
ಸಂತ್ರಸ್ತೆ ನೀಡಿದ್ದ ದೂರಿನಲ್ಲಿ, ದುಷ್ಕರ್ಮಿಯು ತನ್ನ ಮತ್ತು ಸ್ನೇಹಿತನ ಮೇಲೆ ದಾಳಿ ಮಾಡಿದ್ದಾನೆ. ಪೊದೆಗೆ ಎಳೆದೊಯ್ದು ದೌರ್ಜನ್ಯ ಎಸಗಿದ್ದಾನೆ ಎಂದು ಉಲ್ಲೇಖಿಸಿದ್ದಳು.
ಈ ಸಂಬಂಧ ಪ್ರಕರಣದ ತನಿಖೆಗೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶಿಸಿದೆ.