ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ ಮತ್ತು ಶಿಸ್ತು ಉಲ್ಲಂಘಿಸುವವರ ವಿರುದ್ಧ ಹೈಕಮಾಂಡ್ ಚಾವಟಿ ಬೀಸಿದೆ. ಪಕ್ಷದ ಹಿರಿಯ ವಕ್ತಾರ ಎಂ.ಜಿ. ಮಹೇಶ್ ಉಚ್ಚಾಟನೆಯ ಬೆನ್ನಲ್ಲೇ, ಇದೀಗ ಬಿಜೆಪಿ ರೈತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆಯನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆಗಳು ಮತ್ತು ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಈ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಉಚ್ಚಾಟನೆಗೆ ಪ್ರಮುಖ ಕಾರಣ:
ಸತೀಶ್ ಕಡತನಮಲೆ ಅವರು ಯಲಹಂಕ ಶಾಸಕ ಎಸ್‌ಆರ್ ವಿಶ್ವನಾಥ್ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರ ವಿರುದ್ಧ ಸುದ್ದಿಗೋಷ್ಠಿ ನಡೆಸಿ ಬಹಿರಂಗವಾಗಿ ಗಂಭೀರ ಆರೋಪಗಳನ್ನು ಮಾಡಿದ್ದರು. ಪಕ್ಷದ ಆಂತರಿಕ ವೇದಿಕೆಗಳನ್ನು ಬಳಸದೆ, ಮಾಧ್ಯಮಗಳ ಮುಂದೆ ಹೇಳಿಕೆ ನೀಡಿರುವುದು ಪಕ್ಷಕ್ಕೆ ತೀವ್ರ ಮುಜುಗರ ತಂದಿದೆ ಎಂದು ಶಿಸ್ತು ಸಮಿತಿ ಪರಿಗಣಿಸಿದೆ. ಇತ್ತೀಚಿನ ದಿನಗಳಲ್ಲಿ ಇವರು ಕಾಂಗ್ರೆಸ್ ನಾಯಕರೊಂದಿಗೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು ಮತ್ತು ಪಕ್ಷದ ಶಿಸ್ತು ನಿಯಮಾವಳಿಗಳನ್ನು ಗಾಳಿಗೆ ತೂರಿದ್ದರು ಎಂಬ ಆರೋಪವೂ ಇವರ ಮೇಲಿದೆ.
ಇದನ್ನೂ ಓದಿ:
ಮುಂದುವರಿದ ಉಚ್ಚಾಟನೆ
ಕಮಲ ಪಾಳಯದಲ್ಲಿ ಶಿಸ್ತು ಕ್ರಮದ ಸರಣಿ ಮುಂದುವರೆದಿದ್ದು, ಕೇವಲ ಎರಡು ದಿನಗಳ ಹಿಂದಷ್ಟೇ ಮೈಸೂರು ಮೂಲದ ಹಿರಿಯ ನಾಯಕ ಮತ್ತು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್‌ರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿತ್ತು. ಜೂನ್ 19ರಂದು ನಡೆದ ಪಕ್ಷದ ಆಂತರಿಕ ಸಭೆಯಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಸತೀಶ್ ವಿಕೆಟ್ ಉರುಳುವ ಮೂಲಕ ಪಕ್ಷದಲ್ಲಿ ಶಿಸ್ತು ಮೀರಿದರೆ ಯಾರನ್ನೂ ಬಿಡುವುದಿಲ್ಲ ಎಂಬ ಕಠಿಣ ಸಂದೇಶವನ್ನು ಹೈಕಮಾಂಡ್ ರವಾನಿಸಿದೆ.



