ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಬರದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ರಾಜ್ಯ ಸರ್ಕಾರವು ಕಾಲಹರಣ ಮಾಡದೆ ತಕ್ಷಣವೇ ಕರ್ನಾಟಕವನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಒಂದು ವಾರದೊಳಗೆ ಸಮರ್ಪಕ ಮಳೆಯಾಗದಿದ್ದರೆ ಇಡೀ ರಾಜ್ಯ ಸಂಪೂರ್ಣ ಭೀಕರ ಬರಗಾಲದತ್ತ ಸಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಕೇವಲ ಶೇ. 30ರಷ್ಟು ಬಿತ್ತನೆ: ರೈತರು ಕಂಗಾಲು
ರಾಜ್ಯದ ಪ್ರಸ್ತುತ ಕೃಷಿ ಪರಿಸ್ಥಿತಿಯ ಕುರಿತು ಮಾಹಿತಿ ನೀಡಿದ ಬೊಮ್ಮಾಯಿ ಅವರು, ಪ್ರಸಕ್ತ ಸಾಲಿನಲ್ಲಿ ಮಳೆಯ ಅಭಾವದಿಂದಾಗಿ ರಾಜ್ಯದಲ್ಲಿ ಈವರೆಗೆ ಕೇವಲ ಶೇ. 30ರಷ್ಟು ಮಾತ್ರ ಬಿತ್ತನೆಯಾಗಿದೆ. ಇನ್ನುಳಿದ ಶೇ. 70ರಷ್ಟು ಕೃಷಿ ಪ್ರದೇಶಗಳಲ್ಲಿ ಬಿತ್ತನೆ ಕಾರ್ಯವೇ ಆರಂಭವಾಗಿಲ್ಲ. ಇದರಿಂದಾಗಿ ಅನ್ನದಾತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ, ಎಂದು ವಿವರಿಸಿದರು. ಮುಂದಿನ ಒಂದು ವಾರದಲ್ಲಿ ಮಳೆ ಬಾರದಿದ್ದರೆ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರ ಸ್ವರೂಪ ಪಡೆಯಲಿದೆ ಎಂದು ಎಚ್ಚರಿಸಿದರು.
ತುರ್ತು ಸಭೆಗೆ ಒತ್ತಾಯ
ಇಂತಹ ಕಠಿಣ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ತಕ್ಷಣವೇ ಎಚ್ಚೆತ್ತುಕೊಳ್ಳಬೇಕು. ಮುಖ್ಯಮಂತ್ರಿಗಳು ತಕ್ಷಣವೇ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ತುರ್ತು ಸಭೆ ನಡೆಸಿ, ಆಯಾ ಭಾಗದ ವಾಸ್ತವ ಸ್ಥಿತಿಗತಿಯ ಬಗ್ಗೆ ತಳಮಟ್ಟದ ವರದಿ ಪಡೆಯಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:
ವಿಪತ್ತು ನಿಧಿ ಬಳಕೆಗೆ ಸಲಹೆ
ರಾಜ್ಯ ಸರ್ಕಾರದ ಪ್ರಕೃತಿ ವಿಕೋಪ ಪರಿಹಾರ ನಿಧಿಯಲ್ಲಿ (SDRF) ಸದ್ಯ ಹಣ ಲಭ್ಯವಿದೆ. ಸರ್ಕಾರ ಈ ಹಣವನ್ನು ಬಳಸಿಕೊಂಡು ತಕ್ಷಣವೇ ಬರ ಪರಿಹಾರ ಮತ್ತು ಕುಡಿಯುವ ನೀರಿನ ತುರ್ತು ಕಾಮಗಾರಿಗಳನ್ನು ಜಾರಿಗೊಳಿಸಬೇಕು. ರಾಜ್ಯ ಸರ್ಕಾರ ಮೊದಲು ತನ್ನ ನಿಧಿಯಿಂದ ಸಮೀಕ್ಷೆ ನಡೆಸಿ ಬರಗಾಲ ಘೋಷಿಸಿದರೆ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ ಹೆಚ್ಚುವರಿ ಪರಿಹಾರದ ನೆರವು ಪಡೆಯಲು ಸಾಧ್ಯವಾಗುತ್ತದೆ,” ಎಂದು ಬೊಮ್ಮಾಯಿ ತಿಳಿಸಿದರು.
ಎಲ್‌ನಿನೋ ಪರಿಣಾಮದ ಬಗ್ಗೆ ಮೊದಲೇ ಮುನ್ಸೂಚನೆ ಇದ್ದರೂ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಅವರು ಇದೇ ವೇಳೆ ಅಸಮಾಧಾನ ವ್ಯಕ್ತಪಡಿಸಿದರು.



