ಮೂರು ವರ್ಷವಾದ್ರೂ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಕೋರ್ಸು ತೆಗೆದುಕೊಳ್ಳುವವರಿಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸತತವಾಗಿ ಮೂರನೇ ಶೈಕ್ಷಣಿಕ ವರ್ಷದಲ್ಲಿಯೂ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಕೋರ್ಸ್‌ಗಳನ್ನು ತೆಗೆದುಕೊಳ್ಳುವವರು ಕಂಡುಬಂದಿಲ್ಲದಿರುವುದು ಬೇಸರದ ಸಂಗತಿ. ರಾಜ್ಯದ ಮೂರು ಕಾಲೇಜುಗಳಲ್ಲಿಯೂ ಎಲ್ಲಾ 90 ಸೀಟುಗಳು ಖಾಲಿ ಉಳಿದಿದ್ದು, ಕನ್ನಡದಲ್ಲಿ ಇಂಜಿನಿಯರಿಂಗ್ ಕಲಿಯಲು ಪ್ರೋತ್ಸಾಹ ಇಲ್ಲದಿರುವುದೇ ಇದಕ್ಕೆ ಕಾರಣ ಎನ್ನುತ್ತಾರೆ ತಜ್ಞರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇತ್ತೀಚೆಗೆ 2022-23ನೇ ಶೈಕ್ಷಣಿಕ ವರ್ಷಕ್ಕೆ ಪದವಿಪೂರ್ವ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ ಮತ್ತು ಲಭ್ಯವಿರುವ ಅಂಕಿಅಂಶಗಳ ಪ್ರಕಾರ, ಕನ್ನಡ ಮಾಧ್ಯಮ ಇಂಜಿನಿಯರಿಂಗ್ ಅನ್ನು ಯಾರೂ ತೆಗೆದುಕೊಂಡಿಲ್ಲ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ (ವಿಟಿಯು) ಪ್ರಕಾರ, ಆಯ್ಕೆಯ ಪ್ರವೇಶದ ಸಮಯದಲ್ಲಿ 30 ಅಭ್ಯರ್ಥಿಗಳು ಕನ್ನಡ ಮಾಧ್ಯಮದ ಎಂಜಿನಿಯರಿಂಗ್ ಸೀಟುಗಳನ್ನು ಆಯ್ಕೆ ಮಾಡಿಕೊಂಡರು ಮತ್ತು ಅವರಿಗೂ ಸೀಟುಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ ಅವರ್ಯಾರೂ ಕಾಲೇಜುಗಳಿಗೆ ವರದಿ ಮಾಡಿಕೊಂಡಿಲ್ಲ.

2021-22ರಲ್ಲಿ 10 ವಿದ್ಯಾರ್ಥಿಗಳು ಸೀಟುಗಳನ್ನು ಆಯ್ಕೆ ಮಾಡಿಕೊಂಡಿದ್ದರು ಆದರೆ ಅವರಲ್ಲಿ ಯಾರೂ ಪ್ರವೇಶ ಪಡೆದಿಲ್ಲ. 2020-21ನೇ ಶೈಕ್ಷಣಿಕ ವರ್ಷದಲ್ಲಿಯೂ 17 ವಿದ್ಯಾರ್ಥಿಗಳು ಸೀಟುಗಳನ್ನು ಆಯ್ಕೆ ಮಾಡಿಕೊಂಡಿದ್ದರೂ ಕಾಲೇಜುಗಳಿಗೆ ವರದಿ ಮಾಡಿಕೊಂಡಿರಲಿಲ್ಲ.

2020-21ನೇ ಶೈಕ್ಷಣಿಕ ವರ್ಷದಿಂದ ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್ ಶಿಕ್ಷಣ ನೀಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಕರ್ನಾಟಕದ ಎಸ್ ಜೆ ಸಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಚಿಕ್ಕಬಳ್ಳಾಪುರ), ಮಹಾರಾಜ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಮೈಸೂರು) ಮತ್ತು ಭೀಮಣ್ಣ ಖಂಡ್ರೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬೀದರ್) ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಸಿವಿಲ್ ಮತ್ತು ಮೆಕ್ಯಾನಿಕಲ್ ಸ್ಟ್ರೀಮ್‌ಗಳಲ್ಲಿ ಎಂಜಿನಿಯರಿಂಗ್ ಕೋರ್ಸ್‌ಗಳನ್ನು ನೀಡುತ್ತವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!