ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ವಿಪರೀತ ಹಾನಿಯಾಗಿದ್ದು, ಈವರೆಗೂ ರಾಜ್ಯ ಸರ್ಕಾರ ಪರಿಹಾರ ಘೋಷಿಸಿಲ್ಲ. ಹೀಗಾಗಿ ಕೇಂದ್ರ ಮಧ್ಯಪ್ರವೇಶಿಸಿ ಪರಿಹಾರ ಘೋಷಿಸುವಂತೆ ಮನವಿ ಮಾಡಿ, ಪ್ರಧಾನಿ ಮೋದಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಉತ್ತರ ಕರ್ನಾಟಕದಲ್ಲಿ ಆಗಿರುವ ಭೀಕರ ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ. ಆದರೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಇದರ ಬಗ್ಗೆ ಸೂಕ್ತ ಕಾಳಜಿ ಹಾಗೂ ಪರಿಹಾರ ಘೋಷಿಸಿಲ್ಲ. ಈ ಕಾರಣದಿಂದಾಗಿ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ, ನೆರೆ ಪೀಡಿತ ಜಿಲ್ಲೆಗಳಿಗೆ ಪರಿಹಾರ ಘೋಷಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲಿಖಿತ ಮನವಿಯನ್ನು ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.
ಇತ್ತೀಚಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭೀಕರ ಮಳೆಯಿಂದಾಗಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸಿದ್ದರು. ಬಳಿಕ ಎನ್‌ಡಿಆರ್‌ಎಫ್ ನಿಯಮದ ಪ್ರಕಾರ ಕುಷ್ಕಿ ಜಮೀನಿಗೆ ಹೆಕ್ಟೇರ್‌ಗೆ 8,500 ರೂ, ನೀರಾವರಿ ಜಮೀನಿಗೆ ಹೆಕ್ಟೇರ್‌ಗೆ 17 ಸಾವಿರ ರೂ., ಬಹುವಾರ್ಷಿಕ ಬೆಳೆಗೆ 22,500 ರೂ. ಪರಿಹಾರ ಇದೆ. ಸಮೀಕ್ಷೆ ಮುಗಿದ ತಕ್ಷಣ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದರು.
ಸದ್ಯ ಸೂಕ್ತ ಪರಿಹಾರ ಸಿಗದ ಹಿನ್ನೆಲೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ನೆರೆ ಪೀಡಿತ ಜಿಲ್ಲೆಗಳಿಗೆ ಎನ್‌ಡಿಆರ್‌ಎಫ್ ಅಡಿ ಪರಿಹಾರ ಘೋಷಿಸಬೇಕು ಎಂದು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.