ಸೋಲಿನಿಂದ ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ, ಬಿಜೆಪಿ ಮತ್ತೆ ರಾಜ್ಯದಲ್ಲಿ ಪುಟಿದೇಳಲಿದೆ: ಬೊಮ್ಮಾಯಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸರ್ಕಾರದ ಕಾರ್ಯಕ್ರಮ ತಲುಪಿಸುವಲ್ಲಿ ಹಿಂದೆ ಬಿದ್ದು ಬಿಜೆಪಿ ಚುನಾವಣೆಯಲ್ಲಿ ಸೋತಿರಬಹುದು, ಆದರೆ ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ. ನಾವು ಮತ್ತೆ ರಾಜ್ಯದಲ್ಲಿ ಪುಟಿದೇಳುತ್ತೇವೆ. ಸದ್ಯ ಜನರ ತೀರ್ಮಾನದಂತೆ ನಾವು ಸಮರ್ಥ ಪ್ರತಿಪಕ್ಷವಾಗಿ ಕಾರ್ಯ ನಿರ್ವಹಿಸುತ್ತೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು.

ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣಾ ಫಲಿತಾಂಶದ ಆರು ದಿನಗಳ ಬಳಿಕ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ.‌ ಶಿವಕುಮಾರ್ ಆಯ್ಕೆ ಆಗಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಪ್ರಜಾಪ್ರಭುತ್ವದ ತೀರ್ಪು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು.

ರಾಜಕಾರಣದಲ್ಲಿ ಪಾತ್ರಗಳನ್ನು ತೀರ್ಮಾನಿಸುವುದು ಜನ. ನಮಗೆ ವಿಪಕ್ಷವಾಗಿ ಜನ ತೀರ್ಮಾನ ಕೊಟ್ಟಿದ್ದಾರೆ. ಕಾಂಗ್ರೆಸ್ ನ ಗ್ಯಾರಂಟಿಗಳ ಮೇಲೆ ಜನರಿಗೆ ದೊಡ್ಡ ವಿಶ್ವಾಸ ಇದೆ. ಅದನ್ನು ಅವರು ಪೂರೈಸಬೇಕಾಗಿದೆ. ಪೂರೈಸುವ ವೇಳೆ ರಾಜ್ಯದ ಆರ್ಥಿಕ ಸ್ವಾಸ್ಥ್ಯ ಹಾಳಾಗದಂತೆ ನೋಡಿಕೊಳ್ಳುವುದು ಕೂಡ ಅವರ ಜವಾಬ್ದಾರಿ. ಯಾವ ರೀತಿ ನಿಭಾಯಿಸುತ್ತಾರೆ ಅಂತಾ ಕಾದು ನೋಡೋಣ ಎಂದು ಅವರು ಹೇಳಿದರು.

ವಿಪಕ್ಷವಾಗಿ ನಾವು ಜವಾಬ್ದಾರಿಯಿಂದ ಕೆಲಸ ಮಾಡುವ ಅವಶ್ಯಕತೆ ಇದೆ. ನೆಲ-ಜಲ ವಿಚಾರದಲ್ಲಿ ರಾಜಕೀಯ ಬೆರೆಸದೇ ಕೆಲಸ ಮಾಡಬೇಕು. ಜನರಿಗೆ ಅನ್ಯಾಯ ಆದಾಗ ಸರ್ಕಾರಕ್ಕೆ ಎಚ್ಚರಿಕೆ ಕೊಡುವ ಕೆಲಸ ಮಾಡುತ್ತೇವೆ ಎಂದರು.

ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇಲ್ಲ

ಕರ್ನಾಟಕ ಚುನಾವಣೆ ಯಲ್ಲಿ ಬಿಜೆಪಿ ಪಕ್ಷದ ಸೋಲಿನ ಪರಾಮರ್ಶೆ ಬೇರೆ ಬೇರೆ ಹಂತದಲ್ಲಿ ನಡೆಯುತ್ತಿದೆ. ಎರಡು ಮೂರು ದಿನಗಳಲ್ಲಿ ಶಾಸಕರ ಮತ್ತು ಪರಾಜಿತ ಅಭ್ಯರ್ಥಿಗಳ ಸಭೆ ಮಾಡುತ್ತೇವೆ. ಅದೇ ಸಭೆಯಲ್ಲಿ ವಿಪಕ್ಷ ನಾಯಕರ ತೀರ್ಮಾನ ಮಾಡುತ್ತೇವೆ. ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!