ಹೊಸದಿಗಂತ ವರದಿ ರಾಯಚೂರು :
ಬರುವ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಹೇಳಿದರು.
ಶುಕ್ರವಾರ ನಗರದ ಕೃಷಿ ವಿಶ್ವವಿದ್ಯಾಲಯದ ಬಸವೇಶ್ವರ ಸಭಾಂಗಣದಲ್ಲಿ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ2026-27ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಗುಣಾತ್ಮಕ ಫಲಿತಾಂಶ ಸುಧಾರಣೆಗಾಗಿ ಮಿಷನ್ 40+ಸಂಕಲ್ಪ 2.0 ಕಾರ್ಯಕ್ರಮದ ವಿಭಾಗದ ಮಟ್ಟದ ಸಂಪನ್ಮೂಲ ಶಿಕ್ಷಕರ ಕಾರ್ಯಾಗಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ರಾಜ್ಯದ ಸರ್ಕಾರಿ ಶಾಲೆಗಳ ಬಲವರ್ಧನೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದ್ದು, ಶಿಕ್ಷಣ ಇಲಾಖೆಯಲ್ಲಿ ಕೈಗೊಳ್ಳಲಾಗುತ್ತಿರುವ ಪ್ರಮುಖ ಸುಧಾರಣೆಗಳು, ನೇಮಕಾತಿಗಳು ಹಾಗೂ ವಿವಿಧ ಯೋಜನೆಗಳ ಅನುಷ್ಠಾನ ಮಾಡಲಾಗುತ್ತಿದೆ ಎಂದರು. ರಾಜ್ಯದಲ್ಲಿ ಆಂಗ್ಲ ಮಾಧ್ಯಮವನ್ನು ಕಡ್ಡಾಯಗೊಳಿಸುವುದಿಲ್ಲ. ಬದಲಾಗಿ, ಮುಂದಿನ ಜೂನ್‌ನಿಂದ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮವನ್ನೂ (ದ್ವಿಭಾಷಾ ಮಾಧ್ಯಮ ನೀತಿಯನ್ನು) ಜಾರಿಗೆ ತರಲಾಗುವುದು. ಮಕ್ಕಳಿಗೆ ಯಾವ ಮಾಧ್ಯಮ ಬೇಕು ಎಂಬುದನ್ನು ಪೋಷಕರೇ ಆಯ್ಕೆ ಮಾಡಿಕೊಳ್ಳಬಹುದು, ಆದರೆ ಕನ್ನಡ ಭಾಷೆ ಯಾವಾಗಲೂ ಕಡ್ಡಾಯವಾಗಿರುತ್ತದೆ. ಸದ್ಯ 18-19 ಜಿಲ್ಲೆಗಳಲ್ಲಿ ಈ ವ್ಯವಸ್ಥೆ ಜಾರಿಯಲ್ಲಿದೆ ಎಂದು ತಿಳಿಸಿದರು.
ಪ್ರಸಕ್ತ ರಾಜ್ಯದಲ್ಲಿ ಅಂದಾಜು 1,300ಕ್ಕೂ ಹೆಚ್ಚು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಇದರಲ್ಲಿ ಎಡಿಬಿ ಅಡಿ 500, ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಕ್ಷರ ಆವಿಷ್ಕಾರ ನಿಧಿಯಡಿ 200, ಅಲ್ಪಸಂಖ್ಯಾತ ಇಲಾಖೆಯಿಂದ 200 ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ 300ಕ್ಕೂ ಹೆಚ್ಚು ಶಾಲೆಗಳು ಸೇರಿವೆ ಎಂದು ಹೇಳಿದರು.
ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರಿನಡಿ ಶಿಕ್ಷಣ ಸಿಗುವುದರಿಂದ ಮಕ್ಕಳಿಗೆ ಅನುಕೂಲವಾಗಲಿದೆ. ಬರುವ ಜೂ.1ರಿಂದ ಎಲ್ಲಾ ಕೆಪಿಎಸ್ ಶಾಲೆಯ ವಿದ್ಯಾರ್ಥಿಗಳಿಗೆ ಇಲಾಖೆಯ ವತಿಯಿಂದಲೇ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಈ ಸಂಬಂಧ 5ರಿಂದ 7ಕಿ.ಮೀ. ವ್ಯಾಪ್ತಿಯ ಮಾರ್ಗಗಳ ರೂಪುರೇಷೆ ಸಿದ್ಧವಾಗುತ್ತಿದೆ. ಶಿಕ್ಷಕರ ನೇಮಕಾತಿ ಮತ್ತು ಶೈಕ್ಷಣಿಕ ಸಾಧನೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡರು, ಶಿಕ್ಷಣ ಇಲಾಖೆಯ ಅಧಿಕಾರಿಗಳಿದ್ದರು.



