ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಕರ್ನಾಟಕದಲ್ಲಿ ಶನಿವಾರವೂ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ , ಆ ಪ್ರದೇಶಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ. ಶನಿವಾರ ಬೆಳಗಿನ ಜಾವದವರೆಗೆ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಮಹಾರಾಷ್ಟ್ರದಿಂದ ಉತ್ತರ ಕೇರಳ ಕರಾವಳಿಯವರೆಗೆ ಸಮುದ್ರದಲ್ಲಿ ಸುಳಿ ಉಂಟಾಗಿರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶನಿವಾರದಿಂದ ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೆಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದ ಉತ್ತರ ಒಳನಾಡು ಅಥವಾ ದಕ್ಷಿಣ ಒಳನಾಡಿಗೆ ಮಳೆ ಮುನ್ಸೂಚನೆ ನೀಡಿಲ್ಲ.
ಬೆಂಗಳೂರಿನಲ್ಲಿ ಸಾಧಾರಣ ಮಳೆ
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಸಮಯ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಸಾದ್ ತಿಳಿಸಿದ್ದಾರೆ.