ಈಗ ಕೇಂದ್ರದಿಂದಲೇ ನೇರ ಗ್ರಾಪಂಗಳಿಗೆ ಅನುದಾನ: ಜೆ.ಪಿ.ನಡ್ಡಾ

ಹೊಸದಿಗಂತ ವರದಿ, ಚಿತ್ರದುರ್ಗ:

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಕೆಲಸ ಮಾಡಬೇಕೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕರೆ ನೀಡಿದರು.
ಬಿಜೆಪಿ ವತಿಯಿಂದ ಇಲ್ಲಿನ ಮುರುಘಾಮಠದಲ್ಲಿ ಹಮ್ಮಿಕೊಂಡಿದ್ದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ರಾಜ್ಯ ಮಟ್ಟದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಬರುತ್ತಿತ್ತು. ಅಲ್ಲಿಂದ ಗ್ರಾಮ ಪಂಚಾಯಿತಿಗಳಿಗೆ ಬರುವ ಸಂದರ್ಭ ಅನುದಾನ ಸೋರಿಕೆಯಾಗುತ್ತಿತ್ತು. ಆದರೆ ಈಗ ನೇರವಾಗಿ ಕೇಂದ್ರದಿಂದ ಗ್ರಾ.ಪಂ.ಗಳಿಗೆ ಅನುದಾನ ನೀಡಲಾಗುತ್ತಿದೆ ಎಂದರು.
ದೇಶ ಅಭಿವೃದ್ಧಿಯಾಗಬೇಕಾದರೆ ಹಳ್ಳಿಗಳ ಅಭಿವೃದ್ಧಿಯಾಗಬೇಕು. ಹಳ್ಳಿಗಳಲ್ಲಿ ಜಮೀನು ಮಾಲಿಕತ್ವದ ಸಮಸ್ಯೆ ಆಗಿತ್ತು ಅದನ್ನು ನಮ್ಮ ಸರ್ಕಾರ ಪ್ರಾಪರ್ಟಿ ಕಾರ್ಡ್ ಯೋಜನೆ ಮೂಲಕ ಬಗೆಹರಿಸಿದೆ. ಪ್ರತಿ ಗ್ರಾ.ಪಂ.ನಲ್ಲಿ ಇಂಟರ್ನೆಟ್ ವ್ಯವಸ್ಥೆ ಮಾಡಲಾಗಿದೆ. ಜಲ ಜೀವನ್ ಯೋಜನೆ ಮೂಲಕ ಎಲ್ಲಾ ಗ್ರಾಮಗಳಿಗೆ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಆಯುಷ್ಮಾನ್ ಕಾರ್ಡನ್ನು ನಮ್ಮ ಕಾರ್ಯಕರ್ತರು, ಗ್ರಾಮ ಪಂಚಾಯತಿ ಸದಸ್ಯರು ಎಲ್ಲಾ ಜನರಿಗೆ ತಲುಪಿಸಬೇಕು ಎಂದು ಹೇಳಿದರು.
ಕೋವಿಡ್ ಸಂದರ್ಭದಲ್ಲಿ ಗರೀಬ್ ಕಲ್ಯಾಣ ಯೋಜನೆಯಡಿ ಸುಮಾರು 80 ಕೋಟಿಗೂ ಅಧಿಕ ಜನರಿಗೆ ಉಚಿತ ಆಹಾರ ಧಾನ್ಯ ವಿತರಿಸಲಾಗಿದೆ. ಇಡೀ ದೇಶದ ಜನರನ್ನು ಸಾಮಾಜಿಕ ಭದ್ರತಾ ಯೋಜನೆಯಡಿ ತರುವ ಕೆಲಸವಾಗಬೇಕು. ಪ್ರತಿ ಹಳ್ಳಿಗಳಲ್ಲಿ ಯಾವೊಬ್ಬ ವ್ಯಕ್ತಿಯೂ ಸರ್ಕಾರದ ಸೌಲಭ್ಯದಿಂದ ವಂಚಿತರಾಗದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಎಚ್ಚರ ವಹಿಸಬೇಕು. ಅಟಲ್ ಬಿಹಾರಿ ಪಿಂಚಣಿ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆಯಬೇಕೆಂದರು.
ಗ್ರಾಮೀಣ ಭಾಗದ ಅಭಿವೃದ್ಧಿ ಕೆಲಸಗಳನ್ನು ಬೆಂಗಳೂರಿನಲ್ಲಿರುವ ಅಧಿಕಾರಿಗಳು ಮಾಡಲು ಸಾಧ್ಯವಿಲ್ಲ. ಜಿಲ್ಲಾಧಿಕಾರಿಗಳು ಮಾಡುವುದಿಲ್ಲ. ಅಲ್ಲಿನ ಅಭಿವೃದ್ಧಿ ಕುರಿತು ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳೇ ಗಮನ ನೀಡಬೇಕು. ಗ್ರಾಮ ಪಂಚಾಯಿತಿ ಅಧ್ಯಕ್ಷರು. ಉಪಾಧ್ಯಕ್ಷರು ಹಾಗೂ ಸದಸ್ಯರು ಈ ನಿಟ್ಟಿನಲ್ಲಿ ಚಿಂತನೆ ಮಾಡಬೇಕು. ಗ್ರಾಮ ಪಂಚಾಯಿತಿಗಳಿಗೆ ಕೋಟ್ಯಂತರ ರೂ.ಗಳ ಅನುದಾನ ಬರುತ್ತಿದೆ. ಅದನ್ನು ಸದ್ವಿನಿಯೋಗ ಮಾಡಿಕೊಂಡು ಉತ್ತಮ ಕೆಲಸಗಳನ್ನು ಮಾಡಬೇಕು ಎಂದು ಸಲಹೆ ಮಾಡಿದರು.
ಇಂದು ಇಲ್ಲಿ ಸೇರಿರುವ ಅಪಾರ ಸಂಖ್ಯೆಯ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಗಳು, ಅವರ ಹುಮ್ಮಸ್ಸನ್ನು ನೋಡಿದರೆ ನನಗೆ ಸಂತೋಷವಾಗುತ್ತಿದೆ. ನೀವೆಲ್ಲರೂ ಒಂದುಗೂಡಿ ಗ್ರಾಮೀಣಾಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಗ್ರಾಮೀಣ ಜನರಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ನೀಡುವ ಮೂಲಕ ಅಭಿವೃದ್ಧಿ ಸಾಧಿಸಬೇಕು. ಆ ಮೂಲಕ ಹಳ್ಳಿಯಿಂದ ಡೆಲ್ಲಿವರೆಗೆ ಮತ್ತೊಮ್ಮೆ ಕಮಲ ಅರಳುವಂತೆ ಮಾಡಬೇಕು ಎಂದು ಕರೆ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಾರಿಗೆ ಸಚಿವ ಬಿ.ಶ್ರೀರಾಮುಲು, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರ್, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ.
ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್‌ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಶಾಸಕರು ಹಾಗೂ ಕೆಎಸ್‌ಆರ್‌ಟಿಸಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ, ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್, ಗೂಳಿಹಟ್ಟಿ ಶೇಖರ್, ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಲಿಂಗಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ವೈ.ಎ.ನಾರಾಯಣಸ್ವಾಮಿ, ಚಿದಾನಂದಗೌಡ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!