Monday, March 27, 2023

Latest Posts

ತ್ರಿಪುರಾ ವಿಧಾನಸಭೆ ಚುನಾವಣೆ: ಬಿಗಿ ಭದ್ರತೆಯ ನಡುವೆ ಮತದಾನ ಪ್ರಾರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತ್ರಿಪುರಾದ 60 ವಿಧಾನಸಭಾ ಕ್ಷೇತ್ರಗಳಿಗೆ ಇಂದು (ಗುರುವಾರ) ಮತದಾನ ಶುರುವಾಗಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ತ್ರಿಪುರಾದಾದ್ಯಂತ 3,337 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅದರಲ್ಲಿ 1100 ಮತಗಟ್ಟೆಗಳು ಸಮಸ್ಯಾತ್ಮಕವಾಗಿದ್ದು, 28 ಮತದಾನ ಕೇಂದ್ರಗಳನ್ನು ಅತ್ಯಂತ ಸಮಸ್ಯಾತ್ಮಕ ಎಂದು ಗುರುತಿಸಲಾಗಿದೆ. ಮತದಾನ ಕೇಂದ್ರಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 17ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ತ್ರಿಪುರಾ ವಿಧಾನಸಭೆ ಚುನಾವಣೆಯಲ್ಲಿ 13.55 ಲಕ್ಷ ಮಹಿಳೆಯರು ಸೇರಿದಂತೆ ಒಟ್ಟು 28.13 ಲಕ್ಷ ಮತದಾರರಿದ್ದಾರೆ. 20 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 60 ಸ್ಥಾನಗಳಿಗೆ 259 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ-ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ (ಐಪಿಎಫ್‌ಟಿ), ಸಿಪಿಎಂ-ಕಾಂಗ್ರೆಸ್ ಮೈತ್ರಿಕೂಟ ಮತ್ತು ಪ್ರಾದೇಶಿಕ ಪಕ್ಷ ತಿಪ್ರಮೋಥಾ ಈ ಚುನಾವಣೆಯಲ್ಲಿ ಪ್ರಮುಖ ಸ್ಪರ್ಧಿಗಳು. ಬಿಜೆಪಿ 55 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಅದರ ಮಿತ್ರಪಕ್ಷ ಐಪಿಎಫ್‌ಟಿ ಇನ್ನುಳಿದ ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಅದೇ ರೀತಿ ಸಿಪಿಐ(ಎಂ) 47 ಸ್ಥಾನ, ಅದರ ಮೈತ್ರಿ ಪಾಲುದಾರ ಕಾಂಗ್ರೆಸ್ 13 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ತೃಣಮೂಲ ಕಾಂಗ್ರೆಸ್ 28 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, 58 ಸ್ವತಂತ್ರ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ತ್ರಿಪುರಾದ 60 ವಿಧಾನಸಭಾ ಸ್ಥಾನಗಳ ಪೈಕಿ 20 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆಡಳಿತಾರೂಢ ಬಿಜೆಪಿ ಗರಿಷ್ಠ 12 ಮಹಿಳಾ ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕೆ ಇಳಿಸಿದೆ. ಚುನಾವಣಾ ಆಯುಕ್ತರ ಪ್ರಕಾರ, 31,000 ಪೊಲೀಸ್ ಸಿಬ್ಬಂದಿ ಮತ್ತು 25,000 ಕೇಂದ್ರ ಭದ್ರತಾ ಸಿಬ್ಬಂದಿಯನ್ನು ಮತದಾನ ಕೇಂದ್ರಗಳು ಮತ್ತು ರಾಜ್ಯ ಗಡಿಗಳಲ್ಲಿ ನಿಯೋಜಿಸಲಾಗಿದೆ. ಅಂತರಾಷ್ಟ್ರೀಯ ಮತ್ತು ಅಂತರರಾಜ್ಯ ಗಡಿಗಳನ್ನೂ ಮುಚ್ಚಲಾಗಿದೆ. ಇಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗಲಿದ್ದು, ಮಾರ್ಚ್ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!