ಹೊಸ ದಿಗಂತ ವರದಿ , ಶಿವಮೊಗ್ಗ:
ಒಕ್ಕಲಿಗ ಸಮುದಾಯಕ್ಕೆ ಒಬಿಸಿ ಮೀಸಲಾತಿಯಲ್ಲಿ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರಕ್ಕೆ ಶಕ್ತಿ ಮೀರಿ ಮನವರಿಕೆ ಮಾಡುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಕುವೆಂಪು ರಂಗಮಂದಿರದಲ್ಲಿ ಗುರುವಾರ ಜಿಲ್ಲಾ ಒಕ್ಕಲಿಗ ಸಾರ್ವಜನಿಕ ಸಮುದಾಯ ಭವನದ ಭೂಮಿಪೂಜೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರದ ಒಬಿಸಿ ಮೀಸಲಾತಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ಸೌಲಭ್ಯ ಕಲ್ಪಿಸುವಲ್ಲಿ ತಾರತಮ್ಯ ಆಗುತ್ತಿರುವ ಬಗ್ಗೆ ಒಕ್ಕಲಿಗ ನಾಯಕರು ಹಾಗೂ ಸ್ವಾಮೀಜಿಗಳು ಗಮನಕ್ಕೆ ತಂದಿದ್ದು ಈ ಬಗ್ಗೆ ಮುತುವರ್ಜಿ ವಹಿಸಿ ಮೀಸಲಾತಿ ಹೆಚ್ಚಳಕ್ಕೆ ಪ್ರಯತ್ನ ಮಾಡಲಾಗುವುದು ಎಂದರು.