ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಇಟಿ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣಕ್ಕೆ ರಾಜ್ಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದುಇದರ ಬೆನ್ನಲ್ಲೇ ಕರ್ತವ್ಯಲೋಪ ಎಸಗಿದ ಅಧಿಕಾರಿಯ ವಿರುದ್ಧ ಸರ್ಕಾರ ಶಿಸ್ತುಕ್ರಮ ಕೈಗೊಂಡಿದೆ.
ಶಿವಮೊಗ್ಗದಲ್ಲಿ ಪ್ರಕರಣಕ್ಕೆ ಕಾರಣವಾದ ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಬಲವಂತದಿಂದ ಜನಿವಾರ ತೆಗೆಸಿ ಪರೀಕ್ಷಾ ಕೇಂದ್ರಕ್ಕೆ ಸಿಬ್ಬಂದಿ, ಅಧಿಕಾರಿಗಳು ಕಳುಹಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಘಟನೆ ಬಗ್ಗೆ ಬ್ರಾಹ್ಮಣ ಮಹಾಸಭಾ ಹಾಗೂ ವಿಪ್ರ ಸಂಘಟನೆಗಳು ಅಕ್ರೋಶ ವ್ಯಕ್ತಪಡಿಸಿದ್ದು, ಪರೀಕ್ಷಾ ಕೇಂದ್ರದ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.
ಶಿವಮೊಗ್ಗದಲ್ಲಿ ಮಾತ್ರವಲ್ಲ, ಬೀದರ್‌ನಲ್ಲೂಇಂತಹುದೇ ಪ್ರಕರಣ ನಡೆದಿದೆ. ಜನಿವಾರ ಧರಿಸಿದ್ದಕ್ಕೆ ವಿದ್ಯಾರ್ಥಿಯನ್ನು ಸಿಇಟಿ ಕೇಂದ್ರಕ್ಕೆ ಸಿಬ್ಬಂದಿ ಬಿಟ್ಟಿಲ್ಲ.
ಇತ್ತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿ, ಯಾರು ಈ ರೀತಿ ನಡೆದುಕೊಂಡಿದ್ದಾರೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದರು. ಇದರ ಬೆನ್ನಲ್ಲೇ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.