ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾವುದೇ ಸಮಯದಲ್ಲಿ ವಿದೇಶದಿಂದ ರಾಜ್ಯಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ ಇದ್ದು, ಅವರ ಬಂಧನಕ್ಕಾಗಿ ಎಸ್ಐಟಿ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಇದರಂತೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಠಿಕಾಣಿ ಹೂಡಿದೆ.
ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಅಪಹರಿಸಿದ್ದ ಆರೋಪದಡಿ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಶನಿವಾರ ಬಂಧಿಸಿದ್ದರು. ನಂತರ ಭಾನುವಾರ ಮಧ್ಯಾಹ್ನದವರೆಗೂ ಸತತ ವಿಚಾರಣೆ ನಡೆಸಿದ ಅಧಿಕಾರಿಗಳು, ಸಂಜೆ ಬೆಂಗಳೂರಿನ ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದರು.
ಎಸ್ಐಟಿ ಪರ ವಕೀಲರು, ಹೆಚ್ಚಿನ ವಿಚಾರಣೆಗಾಗಿ ರೇವಣ್ಣ ಅವರನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರಲ್ಲಿ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ, ಆರೋಪಿಯನ್ನು ಮೇ 8ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.