Friday, June 2, 2023

Latest Posts

ಕೊಡಗು‌ ವಿಶ್ವವಿದ್ಯಾನಿಲಯದ ಅಧಿಕೃತ ಉದ್ಘಾಟನೆ: ವರ್ಚುವಲ್‌ ಮೂಲಕ ಚಾಲನೆ ನೀಡಿದ ಸಿಎಂ

ಹೊಸದಿಗಂತ ವರದಿ ಕುಶಾಲನಗರ: 

ಕೊಡಗು ಜಿಲ್ಲೆಯ ಜನತೆಯ ಬಹುಕಾಲದ ಕನಸಾದ ‘ಕೊಡಗು ವಿಶ್ವವಿದ್ಯಾನಿಲಯ’ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕೃತವಾಗಿ ಉದ್ಘಾಟಿಸಿದರು. ಬೆಂಗಳೂರಿನ ಜ್ಞಾನಜ್ಯೋತಿ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ವರ್ಚುವಲ್ ಮೂಲಕ ಕೊಡಗು ವಿಶ್ವವಿದ್ಯಾನಿಲಯದ ಉದ್ಘಾಟನೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ರಾಜ್ಯದ ಮೂಲೆ ಮೂಲೆಗಳಲ್ಲಿ ಪ್ರತಿಯೊಬ್ಬ ವ್ಯಕ್ತಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲು ಕರ್ನಾಟಕ ಸರ್ಕಾರವು ದೀರ್ಘಾವಧಿಯ ದೃಷ್ಟಿಕೋನವನ್ನು ರೂಪಿಸಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸುವ ಮೂಲಕ ಇದನ್ನು ಈಗ ಸಾಕಾರಗೊಳಿಸಲಾಗಿದೆ. ಗುಣಮಟ್ಟದ, ಕೌಶಲ್ಯ ಆಧಾರಿತ ಶಿಕ್ಷಣದ ಮೂಲಕ ಅವರ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವ ಮತ್ತು ಸುಧಾರಿಸುವ ಮೂಲಕ ಪ್ರತಿಯೊಬ್ಬ ವ್ಯಕ್ತಿಯನ್ನು ಸಬಲೀಕರಣಗೊಳಿಸುವುದು ಸರಕಾರದ ಉದ್ದೇಶವಾಗಿದೆ ಎಂದರು.

ಕೊಡಗಿನಲ್ಲಿ ಹೊಸ ಮಾದರಿಯ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸುವ ಮೂಲಕ ಇದನ್ನು ಸುಗಮಗೊಳಿಸಲಾಗಿದೆ. ವಿಶ್ವವಿದ್ಯಾನಿಲಯದ ಸರ್ವತೋಮುಖ ಅಭಿವೃದ್ಧಿಗಾಗಿ ಶುಭ ಹಾರೈಸುವುದಾಗಿ ಬೊಮ್ಮಾಯಿ ನುಡಿದರು.

ಸಮಾರಂಭದಲ್ಲಿ ಹಾಜರಿದ್ದ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್ ಅಶ್ವತ್ಥನಾರಾಯಣ ಅವರು ಮಾತನಾಡಿ, ಜಿಲ್ಲೆಗೊಂದು ವಿಶ್ವವಿದ್ಯಾನಿಲಯ ಇರಬೇಕು. ಆ ಮೂಲಕ ಶೈಕ್ಷಣಿಕ ಅಸಮತೋಲನ ನಿರ್ಮೂಲನೆ ಆಗಬೇಕು, ಜೊತೆಗೆ ಯುವಜನರಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಸದಾಶಯದೊಂದಿಗೆ ರಾಜ್ಯ ಸರ್ಕಾರವು ನೂತನ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದೆ. ವೈಯಕ್ತಿಕ ಸ್ವಾವಲಂಬನೆಗಾಗಿ ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿದ ಗುಣಮಟ್ಟದ ಶಿಕ್ಷಣದ ಅಗತ್ಯವನ್ನು ಒತ್ತಿ ಹೇಳುತ್ತಾ ಕೊಡಗು ವಿಶ್ವವಿದ್ಯಾಲಯದ ಶೈಕ್ಷಣಿಕ ಅಭಿವೃದ್ಧಿಗೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ತಿಳಿಸಿದರು.

ಕೊಡಗು ವಿಶ್ವವಿದ್ಯಾನಿಲಯದ ಸಂಸ್ಥಾಪಕ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಮಾತನಾಡಿ, ಈ ನಾಡಿನ ಆಶೋತ್ತರಗಳಿಗೆ ಅನುಗುಣವಾಗಿ ಕೊಡಗು ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿದೆ. ಇಲ್ಲಿ ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು ಹಾಗೂ ಎಲ್ಲರ ಸಲಹೆ ಮತ್ತು ಸಹಕಾರದೊಂದಿಗೆ ಈ ವಿಶ್ವವಿದ್ಯಾನಿಲಯದ ಸರ್ವತೋಮುಖ ಶ್ರೇಯೋಭಿವೃದ್ಧಿಗಾಗಿ ನನ್ನ ನಾಲ್ಕು ವರ್ಷದ ಅವಧಿಯಲ್ಲಿ ಶ್ರಮಿಸುವುದಾಗಿ ನುಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!