ಹೊಸದಿಗಂತ ವರದಿ ಬೆಳಗಾವಿ:
ಶಿವಂ ಅಸೋಸಿಯೇಟ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣನವರ್‌ಗೆ ಸೇರಿದ ಕಚೇರಿಗಳ ಮೇಲೆ ಗುರುವಾರ ಜಿಲ್ಲಾಡಳಿತ ಹಾಗೂ ಸಹಕಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದರು. ನಗರದ ಶಿವಬಸವ ನಗರದಲ್ಲಿರುವ ಎರಡು ಕಚೇರಿಗಳ ಮೇಲೆ ನಡೆದ ಈ ಕಾರ್ಯಾಚರಣೆ ನಗರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರಮಣ ನಾಯಕ್ ನೇತೃತ್ವದಲ್ಲಿ ಸಹಕಾರ ಇಲಾಖೆಯ ಅಧಿಕಾರಿಗಳ ತಂಡ ಕಚೇರಿಗೆ ಭೇಟಿ ನೀಡಿ ಹಣಕಾಸು ವ್ಯವಹಾರಗಳು, ಹೂಡಿಕೆ ದಾಖಲೆಗಳು ಹಾಗೂ ಸಾರ್ವಜನಿಕರಿಂದ ಸಂಗ್ರಹಿಸಿರುವ ಹಣಕ್ಕೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸಿತು. ಈ ವೇಳೆ ಕೆಲ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವ ಮಾಹಿತಿ ಲಭ್ಯವಾಗಿದೆ.
ಶಿವಂ ಅಸೋಸಿಯೇಟ್ ಸಂಸ್ಥೆ ಮಾಜಿ ಸೈನಿಕರು ಸೇರಿದಂತೆ ಸಾರ್ವಜನಿಕರಿಗೆ ಹೆಚ್ಚಿನ ಬಡ್ಡಿದರ ನೀಡುವುದಾಗಿ ಭರವಸೆ ನೀಡಿ ದೊಡ್ಡ ಪ್ರಮಾಣದಲ್ಲಿ ಹಣ ಸಂಗ್ರಹಿಸಿರುವ ಆರೋಪ ಕೇಳಿಬಂದಿದೆ. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಜನರು ಹೂಡಿಕೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಹೂಡಿಕೆದಾರರ ಸಾವಿರಾರು ಕೋಟಿ ರೂಪಾಯಿ ಹಣ ದುರುಪಯೋಗವಾಗಿರುವ ಸಾಧ್ಯತೆಯನ್ನೂ ಅಧಿಕಾರಿಗಳು ತನಿಖೆಯ ವ್ಯಾಪ್ತಿಯಲ್ಲಿ ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.
ಇತ್ತೀಚಿನ ದಿನಗಳಲ್ಲಿ ಶಿವಾನಂದ ನೀಲಣ್ಣನವರ್ ಅವರ ಹಲವು ಹೇಳಿಕೆಗಳು ಹಾಗೂ ಭಾಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದವು. ಕಡೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು, “ನಮ್ಮ ಬಳಿ 15 ಸಾವಿರ ಬಂದೂಕುಗಳಿವೆ, ದೊಡ್ಡ ಸಾಮ್ರಾಜ್ಯ ಕಟ್ಟಿದ್ದೇನೆ, ನಾನು ಯಾರಿಗೂ ಹೆದರಲ್ಲ” ಎಂದು ನೀಡಿದ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಇದೇ ವೇಳೆ “2028ರ ಚುನಾವಣೆಯಲ್ಲಿ 224 ಸ್ಥಾನ ಗೆದ್ದು ಸಿಎಂ ಆಗುತ್ತೇನೆ” ಎಂಬ ಹೇಳಿಕೆಯೂ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು.
ಇದೀಗ ಶಿವಾನಂದ ನೀಲಣ್ಣನವರ್ ನೇತೃತ್ವದಲ್ಲಿ ಮೇ 17ರಂದು “ಸ್ವಚ್ಛ ಬೆಳಗಾವಿ ಸಂಭ್ರಮ” ಹೆಸರಿನಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲು ಸಿದ್ಧತೆ ನಡೆಸಲಾಗಿತ್ತು. ಸುಮಾರು 20ರಿಂದ 25 ಸಾವಿರ ಜನರನ್ನು ಸೇರಿಸಿ ಕಾರ್ಯಕ್ರಮ ನಡೆಸುವ ಉದ್ದೇಶ ಹೊಂದಿರುವುದಾಗಿ ಹೇಳಲಾಗಿತ್ತು. ಆದರೆ ಕಾರ್ಯಕ್ರಮಕ್ಕೆ ಸಂಬಂಧಿಸಿದ ಅನುಮತಿ, ನಗರದಲ್ಲಿ ಅಳವಡಿಸಲಾಗಿದ್ದ ಬ್ಯಾನರ್‌ಗಳು ಹಾಗೂ ಸಾರ್ವಜನಿಕ ಸಭೆಗಳ ಬಗ್ಗೆ ಜಿಲ್ಲಾಡಳಿತ ಈಗಾಗಲೇ ಕಠಿಣ ನಿಲುವು ತೆಗೆದುಕೊಂಡಿತ್ತು.
ಇದನ್ನೂ ಓದಿ:
ಈ ನಡುವೆ ಬೆಳಗಾವಿ ಮಹಾನಗರ ಪಾಲಿಕೆ ಕೂಡ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಪಾಲಿಕೆಯ ಅನುಮತಿ ಪಡೆಯದೇ ನಗರದಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಹಾಗೂ ಜಾಹೀರಾತು ಫಲಕಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿತು. ನಗರದ ವಿವಿಧ ಪ್ರಮುಖ ವೃತ್ತಗಳು, ರಸ್ತೆ ಬದಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗಿದ್ದ ಬ್ಯಾನರ್‌ಗಳನ್ನು ಅಧಿಕಾರಿಗಳು ತೆರವುಗೊಳಿಸಿದರು.
ಕಾರ್ಯಕ್ರಮವನ್ನು ಸರದಾರ್ಸ್ ಮೈದಾನದಲ್ಲಿ ನಡೆಸಲು ಯೋಜನೆ ರೂಪಿಸಲಾಗಿತ್ತು. ಆದರೆ ಅಗತ್ಯ ಆಡಳಿತಾತ್ಮಕ ಅನುಮತಿ ಹಾಗೂ ಭದ್ರತಾ ನಿಯಮಗಳನ್ನು ಪಾಲಿಸದೇ ಮುಂದಾಗಿರುವ ಕಾರಣ ಜಿಲ್ಲಾಡಳಿತ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿತ್ತು.
ನಗರದಲ್ಲಿ ಅನಧಿಕೃತ ಬ್ಯಾನರ್ ಹಾಗೂ ಫ್ಲೆಕ್ಸ್ ಅಳವಡಿಕೆ ವಿರುದ್ಧ ಮುಂದಿನ ದಿನಗಳಲ್ಲಿಯೂ ನಿರಂತರ ಕಾರ್ಯಾಚರಣೆ ನಡೆಸಲಾಗುವುದು ಎಂದು ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ತಿಳಿಸಿದ್ದಾರೆ.
ಈ ನಡುವೆ ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಹೊಸ ತಿರುವು ನೀಡಿದ್ದು, ದಾಖಲೆಗಳ ಪರಿಶೀಲನೆಯ ಬಳಿಕ ಇನ್ನಷ್ಟು ಮಹತ್ವದ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ. ಜಿಲ್ಲಾಡಳಿತ ಹಾಗೂ ಸಹಕಾರ ಇಲಾಖೆ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.



