ಹೊಸದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ 2018ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಸಂದರ್ಭ ಮನೆ ಕಳೆದುಕೊಂಡಿರುವ ಕುಟುಂಬಗಳಿಗೆ ವಿತರಿಸಲು ಬಾಕಿ ಇರುವ ಮನೆಗಳನ್ನು ಒಂದೂವರೆ ತಿಂಗಳೊಳಗೆ ಪೂರ್ಣಗೊಳಿಸಿ ಹಸ್ತಾಂತರ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಮಳೆಯಿಂದ ಉಂಟಾದ ಹಾನಿಯ ಬಗ್ಗೆ ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
2018-19 ರಲ್ಲಿ ನಿರ್ಮಿಸಬೇಕಿದ್ದ ಮನೆಗಳ ಪೈಕಿ 835 ಮನೆಗಳನ್ನು ಈಗಾಗಲೇ ನಿರ್ಮಿಸಲಾಗಿದೆ. ಇದರಲ್ಲಿ ಕೆಲವು ಮಾನೆಗಳು ಮಾತ್ರ ಬಾಕಿ ಇದ್ದು, ಬಹುತೇಕ ಎಲ್ಲಾ ಮನೆಗಳಲ್ಲಿಯೂ ಜನ ವಾಸಿಸುತ್ತಿದ್ದಾರೆ.ಇನ್ಫೋಸಿಸ್ ವತಿಯಿಂದ ನಿರ್ಮಿಸುತ್ತಿರುವ 195 ಮನೆಗಳನ್ನು ಕೂಡಾ ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಿ ಹಸ್ತಾಂತರ ಮಾಡಲಾಗುವುದೆಂದು ಅವರು ಹೇಳಿದರು.
ಸಂಬಂಧಿಕರ ಮನೆಗಳಲ್ಲಿರುವವರಿಗೂ ನೆರವು: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ಮಳೆಗಾಲದಲ್ಲಿ ಅಪಾಯದಲ್ಲಿದ್ದ ಕೆಲವು ಮನೆಗಳವರನ್ನು ಸ್ಥಳಾಂತರಿಸಲಾಗಿದ್ದು, ಕೆಲವರು ಗಂಜಿ ಕೇಂದ್ರದಲ್ಲಿದ್ದರೆ, ಮತ್ತೆ ಕೆಲವರು ಸಂಬಂಧಿಕರ ಮನೆಗಳಲ್ಲಿದ್ದಾರೆ. ಸಂಬಂಧಿಕರ ಮನೆಗಳಲ್ಲಿರುವವರಿಗೂ ಕೂಡಾ ಅಕ್ಕಿ, ಎಣ್ಣೆ, ಬೇಳೆ, ವಿತರಿಸಲು ಸೂಚನೆ ನೀಡಲಾಗಿದೆ. ಅಲ್ಲದೆ ಗಂಜಿ ಕೇಂದ್ರದಿಂದ ಮನೆಗೆ ತೆರಳುವ ಸಂದರ್ಭದಲ್ಲಿಯೂ ಅವರಿಗೆ ಪಡಿತರವನ್ನು ಕೊಟ್ಟು ಕಳುಹಿಸಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.
ರಸ್ತೆ ಅಭಿವೃದ್ಧಿಗೆ ಕ್ರಮ: ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ಹಾಗೂ ಮುಖ್ಯ ರಸ್ತೆಗಳ ಅಭಿವೃದ್ಧಿಗೆ ಅಂದಾಜು ಪಟ್ಟಿ ಸಿದ್ಧಪಡಿಸಲು ಸೂಚಿಸಲಾಗಿದೆ. ಮೊದಲ ಹಂತದಲ್ಲಿ ತಕ್ಷಣ ದುರಸ್ತಿ ಮಾಡುವುದರೊಂದಿಗೆ ಎರಡನೇ ಹಂತದಲ್ಲಿ ಹಾಳಾಗಿರುವ ರಸ್ತೆಗಳನ್ನು ಪುನರ್ ನಿರ್ಮಿಸಲಾಗುವುದು ಎಂದು ಬೊಮ್ಮಾಯಿ ನುಡಿದರು.
ವಿದ್ಯುತ್ ಸಂಪರ್ಕ: ಹಾನಿಯಾಗಿರುವ ವಿದ್ಯುತ್ ಕಂಬಗಳ ಪಟ್ಟಿ ಮಾಡಿ, ಟ್ರಾನ್ಸ್’ಫಾರ್ಮರ್ ಹಾಗೂ ಕಂಬಗಳನ್ನು ಪುನರ್ ಸ್ಥಾಪಿಸಲು ವ್ಯವಸ್ಥೆ ಮಾಡಿ ವಿದ್ಯುತ್ ಸಂಪರ್ಕ ನೀಡುವುದು ಇಲ್ಲಿನ ಸೆಸ್ಕ್ ಅಧಿಕಾರಿಗಳ ಜವಾಬ್ದಾರಿ. ನಿಗಮದ ವ್ಯವಸ್ಥಾಪಕ ನಿರ್ದೇಶಕರು ಖುದ್ದಾಗಿ ಮೇಲ್ವಿಚಾರಣೆ ಮಾಡುವಂತೆ ಸೂಚಿಲಾಗಿದೆ ಎಂದ ಅವರು, ಎನ್.ಡಿ.ಆರ್.ಎಫ್.ನವರು ಕೂಡಾ ಸಮಯಕ್ಕೆ ಸರಿಯಾಗಿ ಕೆಲಸ ಮಾಡಲು ಸೂಚನೆ ನೀಡಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿಗಳು ಈ ಕೆಲಸದ ಮೇಲ್ವಿಚಾರಣೆ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ಟಾಸ್ಕ್ ಫೋರ್ಸ್: ಗ್ರಾಮೀಣ ಪ್ರದೇಶದಲ್ಲಿ ಟಾಸ್ಕ್ ಫೋರ್ಸ್ ರಚಿಸಬೇಕು. ಕೂಡಲೇ ಅಧಿಕಾರಿಗಳು ಎಚ್ಚೆತ್ತು ಕೆಲಸ ಮಾಡಬೇಕು. ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದಂತೆ ಕಂಟ್ರೋಲ್ ರೂಂನ್ನು ಸ್ಥಾಪಿಸಲು ಆದೇಶಿಸಲಾಗಿದೆ. ಜಿಲ್ಲಾಧಿಕಾರಿಗಳ ಬಳಿ ಸಾಕಷ್ಟು ಅನುದಾನ ಲಭ್ಯವಿದ್ದು, ಅಗತ್ಯ ಬಿದ್ದರೆ ಇನ್ನಷ್ಟು ಅನುದಾನವನ್ನು ಒದಗಿಸಲಾಗುವುದು ಎಂದರು.
ಹೂಳು ತೆಗೆಯಲು ಕ್ರಮ: ಕೊಡಗು ಜಿಲ್ಲೆಯ ನಾಲ್ಕು ತಹಶೀಲ್ದಾರರ ಖಾತೆಗಳಲ್ಲಿ ತಲಾ 25 ಲಕ್ಷ ರೂ.ಗಳು ಲಭ್ಯವಿದೆ. ಪ್ರತಿ ಗ್ರಾಮ ಪಂಚಾಯಿತಿಗೆ 50 ಸಾವಿರ ರೂ.ಗಳನ್ನು ಈಗಾಗಲೇ ಒದಗಿಸಲಾಗಿದೆ. ಕಾವೇರಿ ಮತ್ತು ಹಾರಂಗಿ ನದಿ ಪಾತ್ರದಲ್ಲಿ ಹೂಳು ತುಂಬಿದ್ದು,. ಅದರ ಜೊತೆಗೆ ನೀರಿನ ಹರಿವಿನಿಂದ ನೀರು ಹೊರಗೆ ಹರಿಯುತ್ತಿದೆ. ಇದನ್ನು ತಪ್ಪಿಸಲು ಹಾರಂಗಿ ಜಲಾಶಯದ ಹಿಂದಿನ ಪ್ರದೇಶದ ಹೂಳೆತ್ತಲು ಈಗಾಗಲೇ 40 ಕೋಟಿ ರೂ.ಗಳ ಮಂಜೂರಾತಿ ನೀಡಿದ್ದು, ಕೆಲಸ ಕೂಡಲೇ ಪ್ರಾರಂಭವಾಗುತ್ತದೆ. ಹೂಳು, ಮಣ್ಣು ತೆಗೆಯುವುದು ಹಾಗೂ ಗೋಡೆ ನಿರ್ಮಾಣ ಕಾರ್ಯವನ್ನು ಇದು ಒಳಗೊಂಡಿದೆ. ಕಾವೇರಿ ನದಿಯಲ್ಲಿನ ಹೂಳು ತೆಗೆಯಲು ಕಾವೇರಿ ನೀರಾವರಿ ನಿಗಮಕ್ಕೆ ಸೂಚಿಸಲಾಗಿದೆ. ನೀರು ನಿಲ್ಲದಂತೆ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಮರದ ದಿಮ್ಮಿಗಳನ್ನು ಕೂಡಲೇ ತೆರವು ಮಾಡುವಂತೆ ಅರಣ್ಯ ಇಲಾಖೆಗೆ ನಿರ್ದೇಶನ ನೀಡಲಾಗಿದೆ. ಕಳೆದ ಬಾರಿಯ ದಿಮ್ಮಿಗಳು ಹಾಗೆಯೇ ಉಳಿದುಕೊಂಡಿರುವ ಬಗ್ಗೆ ದೂರುಗಳು ಬಂದಿದ್ದು, ನದಿ ಪಾತ್ರದಲ್ಲಿ ಯಾವುದೇ ಮರದ ದಿಮ್ಮಿಗಳು ಇರಬಾರದು ಎಂದು ಸೂಚಿಸಲಾಗಿದೆ ಎಂದರು.
ನಿರೀಕ್ಷೆಗಿಂತ ಅಧಿಕ ಮಳೆ: ಜುಲೈ ತಿಂಗಳಲ್ಲಿ ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಸಣ್ಣ ಪ್ರಮಾಣದ ಭೂಕುಸಿತವಾಗಿ ಸಂಚಾರ ಕಡಿತಗೊಂಡಿದೆ. ಮನೆಗಳು ಹಾನಿಗೊಳಗಾಗಿವೆ. ನದಿ ಪಾತ್ರಗಳು ಉಕ್ಕಿ ಹರಿದು ಪಕ್ಕದಲ್ಲಿರುವ ಜಮೀನುಗಳಿಗೆ ಹಾಗೂ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ಹಾನಿಗೊಳಗಾಗಿದ್ದು, ಸೇತುವೆಗಳು ಮಣ್ಣು ಮತ್ತು ಮರದ ದಿಮ್ಮಿಗಳಿಂದ ತುಂಬಿವೆ. ಹಲವಾರು ಗ್ರಾಮಗಳಲ್ಲಿ ವಿದ್ಯುತ್ ಕಡಿತಗೊಂಡಿದೆ. ಇವೆಲ್ಲವನ್ನೂ ಇಂದು ಪರಿಶೀಲಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ನುಡಿದರು.
ಈ ಬಾರಿಯ ಮುಂಗಾರಿನಲ್ಲಿ ಹತ್ತು ದಿನಗಳೊಳಗೆ ಶೇ.114ರಷ್ಟು ಮಳೆಯಾಗಿದ್ದು, ಇದುವರೆಗೂ ಸಂಪೂರ್ಣವಾಗಿ ಎರಡು ಮನೆಗಳು ಹಾನಿಗೊಳಗಾಗಿದ್ದು, 15 ತೀವ್ರಗತಿಯಲ್ಲಿ ಹಾನಿಯಾಗಿವೆ. 63 ಮನೆಗಳು ಭಾಗಶಃ ಹಾನಿಗೊಳಗಾಗಿದೆ ಎಂದು ಮಾಹಿತಿ ನೀಡಿದ ಮುಖ್ಯಮಂತ್ರಿಗಳು ಸಂಪೂರ್ಣ ಹಾನಿಗೊಳಗಾಗಿರುವ ಮನೆಗಳಿಗೆ ತಲಾ 5 ಲಕ್ಷ ರೂ.ಗಳು, ತೀವ್ರ ಹಾನಿಯಾದ ಮನೆಗಳಿಗೆ ತಲಾ 3 ಲಕ್ಷ ರೂ.ಗಳು ಹಾಗೂ ಭಾಗಶ: ಹಾನಿಗೊಳಗಾದ ಮನೆಗಳಿಗೆ 50 ಸಾವಿರ ರೂ.ಗಳ ಪರಿಹಾರವನ್ನು ಕೂಡಲೇ ನೀಡಲು ಸೂಚಿಸಲಾಗಿದೆ. ಬಿದ್ದು ಹೋಗಿರುವ ಮನೆಗಳವರಿಗೆ ತುರ್ತು ವ್ಯವಸ್ಥೆಗಾಗಿ ಈಗಾಗಲೇ 10 ಸಾವಿರ ರೂ.ಗಳನ್ನು ನೀಡಲಾಗಿದೆ ಎಂದರು.
ಕಂದಾಯ ಸಚಿವ ಆರ್.ಅಶೋಕ್, ಇಂಧನ ಸಚಿವ ಸುನಿಲ್ ಕುಮಾರ್, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಶಾಸಕರಾದ ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಮತ್ತಿತರರು ಇದ್ದರು.