ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 20 ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ಭಾನುವಾರ ಮುಂಜಾನೆ ನಡೆದಿದೆ.
45 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಚೆನ್ನೈನಿಂದ ಕೊಯಮತ್ತೂರ್‌ಗೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಚೆಂಗಲ್ಪಟ್ಟು ಜಿಲ್ಲೆಯ ಬಳಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಬಿದ್ದಿದೆ. ಅದರ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಕನ್ಯಾಕುಮಾರಿ ನಿವಾಸಿ ಮಣಿಕಂದನ್ ಎಂದು ಗುರುತಿಸಲಾಗಿದೆ.
ವಿಷಯ ತಿಳಿದ ಕೂಡಲೇ ಚೆಂಗಲ್ಪಟ್ಟು ತಾಲೂಕು ಪೋಲೀಸರು ಸ್ಥಳಕ್ಕೆ ಧಾವಿಸಿ ವ್ಯಕ್ತಿಯ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ನಂತರ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚೆಂಗಲ್ಪಟ್ಟು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಗಾಯಾಳುಗಳನ್ನು ಚೆಂಗಲ್ಪಟ್ಟು ಜಿಲ್ಲೆಯ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಪಘಾತ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.