ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಯಾಣಿಕರ ನಡುವೆ ಕಾಲ್ತುಳಿತದ ಪರಿಣಾಮವಾಗಿ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಗುಜರಾತ್‌ನ ಸೂರತ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಶನಿವಾರ, ಜನರು ತಮ್ಮ ತಮ್ಮ ಊರುಗಳತ್ತ ಪ್ರಯಾಣ ಬೆಳೆಸಿದ್ದಾರೆ. ಹೀಗಾಗಿ ಸೂರತ್ ರೈಲು ನಿಲ್ದಾಣದಲ್ಲಿ ಹೆಚ್ಚಿನ ಪ್ರಯಾಣಿಕರಿಂದ ನೂಕು ನುಗ್ಗಲುನಿಂದಾಗಿ ಕಾಲ್ತುಳಿತ ಸಂಭವಿಸಿದೆ.
ಹಲವರು ಪ್ರಜ್ಞೆ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ. ಸೂರತ್ ಸಂಸದ ಮತ್ತು ರಾಜ್ಯ ರೈಲ್ವೆ ಸಚಿವ ದರ್ಶನ್ ಜರ್ದೋಶ್ ಆಸ್ಪತ್ರೆಗೆ ಭೇಟಿ ನೀಡಿ,ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಗಂಭೀರವಾಗಿ ಗಾಯಗೊಂಡಿರುವ ಸರೋಜಿನಿ ಕುಮಾರಿ ಎಂಬುವರನ್ನು ಉತ್ತಮ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ವರ್ಷದ ದೀಪಾವಳಿ ಹಬ್ಬದ ದೃಷ್ಟಿಯಿಂದ ಪಶ್ಚಿಮ ರೈಲ್ವೆಯು ಮುಂಬೈ, ಗುಜರಾತ್ ಮತ್ತು ಮಧ್ಯಪ್ರದೇಶದ ಭಾಗಗಳಿಗೆ 46 ವಿಶೇಷ ರೈಲುಗಳನ್ನು ಓಡಿಸುತ್ತಿದೆ. 7 ಲಕ್ಷ ಪ್ರಯಾಣಿಕರು ತಮ್ಮ ಗಮ್ಯಸ್ಥಾನಗಳಿಗೆ ಪ್ರಯಾಣಿಸುತ್ತಿದ್ದಾರೆ ಎಂದು ರೈಲ್ವೆ ಮುಖ್ಯ ಪಿಆರ್‌ಒ ಸುಮಿತ್ ಠಾಕೂರ್ ಹೇಳಿದ್ದಾರೆ. ಹಬ್ಬದ ಸಂಭ್ರಮವನ್ನು ಗಮನದಲ್ಲಿಟ್ಟುಕೊಂಡು ಜನಸಂದಣಿ ನಿರ್ವಹಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಸೂರತ್ ನಿಲ್ದಾಣದಲ್ಲಿ ಸುಮಾರು 165 ಆರ್‌ಪಿಎಫ್ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಯಾಣಿಕರಿಗೆ ಟಿಕೆಟ್ ನೀಡಲು ಹೆಚ್ಚುವರಿ ಕೌಂಟರ್ ಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.