ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತಾ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕೋರಿದ್ದಾರೆ.
ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬ್ಯಾನರ್ಜಿ, ಈ ದಿನ ನಾನು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.
ದಿನೇ ದಿನೇ ದೇಶಾದ್ಯಂತ ಹೆಚ್ಚಾಗುತ್ತಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಬಗ್ಗೆ ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂದರೆ ಕಟ್ಟುನಿಟ್ಟಿನ ಕಾನೂನು ಜಾರಿಯಾದರೆ ಮಾತ್ರ ಸಾಧ್ಯ ಎಂದು ತಿಳಿಸಿದ್ದಾರೆ.
ಈ ಕುರಿತು ಬ್ಯಾನರ್ಜಿ ಅವರ ಮುಖ್ಯ ಸಲಹೆಗಾರ ಅಲಾಪನ್ ಬಂಡೋಪಾಧ್ಯಾಯ, ‘ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ದೇಶಾದ್ಯಂತ ನಿಯಮಿತವಾಗಿ ಮತ್ತು ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ ಮತ್ತು ಲಭ್ಯವಿರುವ ದತ್ತಾಂಶಗಳ ಪ್ರಕಾರ ಅನೇಕ ಪ್ರಕರಣಗಳಲ್ಲಿ ಕೊಲೆಯೊಂದಿಗೆ ಅತ್ಯಾಚಾರಗಳು ನಡೆಯುತ್ತಿವೆ. ಪ್ರತಿನಿತ್ಯ ಸುಮಾರು 90 ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆಯುತ್ತಿವೆ. ಇದರಿಂದ ಕಾನೂನಿನ ಮೇಲೆ ಸಮಾಜ ಮತ್ತು ದೇಶದ ಜನರಿಗಿರುವ ನಂಬಿಕೆ ದಿನೇ ಕುಸಿಯುತ್ತಿದೆ. ಮಹಿಳೆಯರು ಸಮಾಜದಲ್ಲಿ ತಾವು ಸುರಕ್ಷಿತರು ಎಂಬುದನ್ನು ಭಾವಿಸಬೇಕೆಂದರೆ ಇಂತಹ ಹೇಯ ಕೃತ್ಯಗಳಿಗೆ ಕಡಿವಾಣ ಹಾಕಲೇಬೇಕಿದೆ ಎಂದು ಪತ್ರ ಓದಿದ್ದಾರೆ .