ಕಲ್ಯಾಣ ಕರ್ನಾಟಕ ಮೀಡಿಯಾ ಹಬ್ಬಕ್ಕೆ ತೆರೆ: ಸಮಗ್ರ ವೀರಾಗ್ರಣಿ ಪ್ರಶಸ್ತಿ ಮುಡಿಗೇರಿಸಿಕೊಂಡ ಶರಣಬಸವ ವಿವಿ

ಹೊಸದಿಗಂತ ವರದಿ, ಕಲಬುರಗಿ:

ಶರಣಬಸವ ವಿಶ್ವವಿದಾಲಯದ ಆವರಣದಲ್ಲಿ ನಡೆದ ಎರಡು ದಿನಗಳ ಕಲ್ಯಾಣ ಕರ್ನಾಟಕ ಮೀಡಿಯಾ ಹಬ್ಬಕ್ಕೆ ಮಂಗಳವಾರ ತೆರೆ ಬಿದ್ದಿದ್ದು, ವಿವಿಧ ಸ್ಪರ್ಧೇಗಳಲ್ಲಿ ಉತ್ತಮ ಸಾಧನೆ ತೋರುವ ಮೂಲಕ ಆತಿಥ್ಯ ವಹಿಸಿದ ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯವು ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.

ಶರಣಬಸವ ವಿ.ವಿ.ಆವರಣದ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಮತ್ತು ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್ ಅವರು ವಿಜೇತರಿಗೆ ಪ್ರಶಸ್ತಿ ವಿತರಿಸಿದರು.

ವಿಜಯಪುರದ ಅಕ್ಕಮಹಾದೇವಿ ರಾಜ್ಯ ಮಹಿಳಾ ವಿಶ್ವವಿದ್ಯಾಲಯವು ರನ್ನರ್ ಅಪ್ ಪ್ರಶಸ್ತಿಗೆ ಪಾತ್ರವಾಯಿತು.ಉಳಿದಂತೆ ವೈಯಕ್ತಿಕ ಮತ್ತು ಗುಂಪು ವಿಭಾಗದ ವಿವಿಧ 10 ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿ ಮತ್ತು ತಂಡಗಳಿಗೂ ಸ್ಮರಣಿಕೆ, ಪ್ರಮಾಣ ಪತ್ರ ಪ್ರದಾನ ಮಾಡಲಾಯಿತು.

ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್, ದಿನದಿಂದ ದಿನಕ್ಕೆ ತಂತ್ರಜ್ಞಾನ ಬೆಳೆಯುತ್ತಿರುವುದರಿಂದ ಗ್ರಾಮೀಣ ಪತ್ರಕರ್ತರಲ್ಲಿ ವೃತ್ತಿ ಕೌಶಲ್ಯ ಹೆಚ್ಚಿಸಲು ಪೂರಕವಾಗಿ ಡಿಜಿಟಲ್ ಮಾಧ್ಯಮದ ಕೌಶಲ್ಯ ಹೆಚ್ಚಿಸುವ ತರಬೇತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ. ಎಸ್.ಜಿ. ಡೊಳ್ಳೆಗೌಡರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ಸಹನಾ ಮಾಜಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿ ಸಿಂಗ್, ಜಿಲ್ಲಾಧ್ಯಕ್ಷ ಬಾಬುರಾವ್ ಯಡ್ರಾಮಿ ಸೇರಿದಂತೆ ಬೊಧಕ, ಬೋಧಕೇತರ ಸಿಬ್ಬಂದಿಗಳು ಇದ್ದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ ಸ್ವಾಗತಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯೆ ಮತ್ತು ಕಾರ್ಯಕ್ರಮದ ಸಂಯೋಜಿಕಿ ರಶ್ಮಿ ಎಸ್. ನಿರೂಪಿಸಿದರು. ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಟಿ.ವಿ.ಶಿವಾನಂದನ್ ವಂದಿಸಿದರು. ಎರಡು ದಿನಗಳ ಕಾಲ ನಡೆದ ಮೀಡಿಯಾ ಫೆಸ್ಟ್ ನಲ್ಲಿ ಕಲಬುರಗಿ ಮತ್ತು ಬೆಳಗಾವಿ ವಿಭಾಗದ ನೂರಾರು ಸಂಖ್ಯೆಯ ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!