ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರ ಹಿಂಸಾಚಾರದ ಕುರಿತು ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿಕೆ ನೀಡುವಂತೆ ಒತ್ತಾಯಿಸಿ ವಿವಿಧ ವಿರೋಧ ಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಸೋಮವಾರ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ವಿಪಕ್ಷಗಳ INDIA ಮೈತ್ರಿಕೂಟದ ಅಡಿಯಲ್ಲಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಸಾಮೂಹಿಕ ಪ್ರತಿಭಟನೆಗೆ ಮುಂದಾಗಿವೆ. ವಿವಿಧ ವಿರೋಧ ಪಕ್ಷಗಳ ನಾಯಕರು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ ಮತ್ತು ಸಂಸತ್ತಿನಲ್ಲಿ ತಮ್ಮ ಮುಂದಿನ ಕಾರ್ಯತಂತ್ರವನ್ನು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜುಲೈ 24, ಸೋಮವಾರ ಬೆಳಿಗ್ಗೆ 10 ಗಂಟೆಗೆ ಸಭೆಯ ನಂತರ, ನಾಯಕರು ಉಭಯ ಸದನಗಳಿಗೆ ಪ್ರವೇಶಿಸುವ ಮೊದಲು ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದ್ದಾರೆ.