ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಇಂದು 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯು ಕೊಡಗು, ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯ ಮುನ್ಸೂಚನೆ ನೀಡಿದೆ.
ಗಾಳಿಯ ವೇಗ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.
ಕೊಡಗಿನಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲಾದ್ಯಂತ ಆರೆಂಜ್ ಅಲರ್ಟ್ ಘೋಷಿಸಿದ್ದು, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿರುವ ಹಿನ್ನೆಲೆ ಇಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜ್ ಆದೇಶ ಹೊರಡಿಸಿದ್ದಾರೆ.