ಹೊಸದಿಗಂತ ಡಿಜಿಟಲ್ ಡೆಸ್ಕ್:
ಬುಧವಾರ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಎಚ್ಚರಿಸಿದೆ. ಈಶಾನ್ಯ ಮಾನ್ಸೂನ್ ತೀವ್ರಗೊಳ್ಳುತ್ತಿರುವ ಕಾರಣ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿ, ಎಪಿ ಮತ್ತು ತೆಲಂಗಾಣದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.
ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಈಗಾಗಲೇ ಶಾಲೆಗಳಿಗೆ ರಜೆ ನೀಡಲಾಗಿದ್ದು, ಬುಧವಾರ ಬಿಡುಗಡೆ ಮಾಡಿರುವ ಹವಾಮಾನ ಬುಲೆಟಿನ್‌ನಲ್ಲಿ ಬುಧವಾರ ಮತ್ತು ಗುರುವಾರ ಕೇರಳ, ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರವು ಮುಂದಿನ ಎರಡು ದಿನಗಳಲ್ಲಿ ತಮಿಳುನಾಡಿನ 10 ಜಿಲ್ಲೆಗಳಲ್ಲಿ ಮಧ್ಯಂತರ ಮಳೆ ಬೀಳಲಿದೆ ಎಂದು ಮುನ್ಸೂಚನೆ ನೀಡಿದೆ.
ಬುಧವಾರ ಕೇರಳದ ಪತ್ತನಂತಿಟ್ಟ ಮತ್ತು ತಿರುವನಂತಪುರ ಜಿಲ್ಲೆಗಳಲ್ಲಿ ಕ್ರಮವಾಗಿ 5 ಸೆಂ.ಮೀನಿಂದ 7 ಸೆಂ.ಮೀ ಮಳೆಯಾಗಿದೆ. ಹಾಗೆಯೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯಾಘಿದ್ದು, ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಆಂಧ್ರಪ್ರದೇಶ, ರಾಯಲಸೀಮಾ ಮತ್ತು ಯಾಣಂನ ಕೆಲವು ಭಾಗಗಳಲ್ಲಿಯೂ ಭಾರಿ ಮಳೆಯಾಗಲಿದೆ.