ಹೊಸದಿಗಂತ ಡಿಜಿಟಲ್ ಡೆಸ್ಕ್:
(ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ವೇದಿಕೆ)ಎಲ್ಲ ಸಮುದಾಯಗಳಿಗೆ ಸರ್ಕಾರಿ ಸೌಲಭ್ಯಗಳನ್ನು ಒದಗಿಸುವ ಮೂಲಕ ನಮ್ಮ ಸರ್ಕಾರ ಸಾಮಾಜಿಕ ನ್ಯಾಯವನ್ನು ಒದಗಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶುಕ್ರವಾರ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ರಾಮದುರ್ಗ ತಾಲೂಕಿನ ಅಂದಾಜು ರೂ. 671.28 ಕೋಟಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಹತ್ತು ಲಕ್ಷಕ್ಕೂ ಅಧಿಕ ಮಕ್ಕಳಿಗೆ 600 ಕೋಟಿ ರೂಪಾಯಿ ಶಿಷ್ಯವೇತನವನ್ನು ರೈತ ವಿದ್ಯಾನಿಧಿ ಯೋಜನೆ ಮೂಲಕ ಒದಗಿಸಲಾಗಿದೆ.
ಇದೇ ರೀತಿ ಕೃಷಿ ಕೂಲಿಕಾರರು, ಮೀನುಗಾರರು, ಚಾಲಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದರು.
ಕಾಯಕ, ಸ್ತ್ರೀ ಸಾಮರ್ಥ್ಯ ಯೋಜನೆ ಮೂಲಕ ಎಲ್ಲ ವರ್ಗದ ಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರ ನೆರವು ನೀಡುತ್ತಿದೆ.
ನಮ್ಮ ಕ್ಲಿನಿಕ್, ಶಾಲಾ ಕೊಠಡಿಗಳ ನಿರ್ಮಾಣ, ಆರೋಗ್ಯ ಸೌಲಭ್ಯ ಹೆಚ್ಚಳ ಮತ್ತಿತರ ವಿಷಯಗಳನ್ನು ಪ್ರಸ್ತಾಪಿಸಿದ ಅವರು, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡಲಾಗಿದೆ ಎಂದರು.
ಪ್ರಜಾಪ್ರಭುತ್ವ ಎಂದರೆ ಮತ ಹಾಕುವುದು ಮಾತ್ರವಲ್ಲ, ದೇಶ ಕಟ್ಟುವುದರಲ್ಲಿ ಸರ್ವರ ಪಾಲ್ಗೊಳ್ಳುವಿಕೆಯು ಪ್ರಜಾಪ್ರಭುತ್ವದ ಶಕ್ತಿಯಾಗಿದೆ ಎಂದರು.