ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ ಸುಮಾರು 11ಕ್ಕೂ ಹೆಚ್ಚು ಜನ ಮಹಿಳೆಯರು, ಮಕ್ಕಳು ಅಸ್ವಸ್ಥರಾದ ಘಟನೆ ಸೋಮವಾರ ಸಂಜೆ ನಡೆದಿದೆ.
ಪುತ್ತೂರು ಶಾಸಕ ಅಶೋಕ್ ರೈ ಮಾಲಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಆಶ್ರಯದಲ್ಲಿ
ದೀಪಾವಳಿ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತಟ್ಟೆ, ವಸ್ತ್ರ ಹಂಚುವ ಅಶೋಕ ಜನಮನ ಕಾರ್ಯಕ್ರಮ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಮಧ್ಯಾಹ್ನ
ಸಿ.ಎಂ. ಸಿದ್ದರಾಮಯ್ಯ ಉದ್ಘಾಟನೆ ಮಾಡಿ ತೆರಳಿದ್ದರು. ಆ ಬಳಿಕ ಈ ದುರ್ಘಟನೆ ಸಂಭವಿಸಿದೆ.
ಕ್ರೀಡಾಂಗಣದ ಸಾಮರ್ಥ್ಯಕ್ಕಿಂದ ಹೆಚ್ಚು ಜನ ಭಾಗಿಯಾದ ಕಾರಣ ಭಾರೀ ನೂಕುನುಗ್ಗಲು ಉಂಟಾಗಿ ಆಮ್ಲಜನಕ ಕೊರತೆಯಿಂದ ಭಾಗವಹಿಸಿದ್ದ ಮಂದಿ ಅಸ್ವಸ್ಥರಾದರು. ಜೊತೆಗೆ ಕುಡಿಯಲು ನೀರು ಸಿಗದೆ ಜನರು ಪರದಾಡುವಂತಾಯಿತು. ಅಲ್ಲದೆ, ಕೆಸರು ತುಂಬಿದ್ದ ಮೈದಾನದಲ್ಲಿ ಸಣ್ಣ ಸಣ್ಣ ಮಕ್ಕಳನ್ನು ಹಿಡಿದುಕೊಂಡು ಬಂದಿದ್ದವರು ಕಂಗಾಲಾಗುವಂತೆ ಆಗಿತ್ತು.
ಪೊಲೀಸ್ ಇಲಾಖೆ ಸ್ಪಷ್ಟನೆ
ಆಹಾರ ಮತ್ತು ಗಿಫ್ಟ್ ವಿಳಂಬವಾಗಿ ನೀಡಿದ ಕಾರಣ ಈ ದುರ್ಘಟನೆ ನಡೆದಿದೆ. ಹೈಪೊಗ್ಲೇಸಮೀಯ ಅಥವಾ ಡಿಹೈಡ್ರೇಷನ್ ಉಂಟಾಗಿದೆ. 3 ಮಹಿಳೆಯರಿಗೆ ಐ.ವಿ. ಫ್ಲೂಯಿಡ್ಸ್ ನೀಡಲಾಗಿದ್ದು 7 ಜನ ಮಹಿಳೆಯರು ಈಗಾಗಲೇ ಹೊರರೋಗಿಯಾಗಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿರುತ್ತಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.