ಹೊಸದಿಗಂತ ಡಿಜಿಟಲ್ ಡೆಸ್ಕ್:
2019 ರಿಂದ 2021ರ ನಡುವೆ ದೇಶದಲ್ಲಿ ಸುಮಾರು 35 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಮಂಗಳವಾರ ಸಂಸತ್‌ಗೆ ಮಾಹಿತಿ ನೀಡಿದೆ.
ದೇಶದಲ್ಲಿ ಸಾಮಾಜಿಕ ತಾರತಮ್ಯಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡವರಲ್ಲಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಸಂಖ್ಯೆಗೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ ಅಂಕಿಅಂಶಗಳನ್ನು ಸದನದ ಮುಂದಿಟ್ಟಿದ್ದಾರೆ. ದೇಶದಲ್ಲಿ ಸಾಮಾಜಿಕ ತಾರತಮ್ಯದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡವರಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಸಂಖ್ಯೆಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ಬ್ಯೂರೋದ ಅಂಕಿಅಂಶಗಳ ಪ್ರಕಾರ ವಿದ್ಯಾರ್ಥಿಗಳ ಆತ್ಮಹತ್ಯೆ ಸಂಖ್ಯೆ 2019ರಲ್ಲಿ 10,335, 2020ರಲ್ಲಿ 12,526 ಮತ್ತು 2021ರಲ್ಲಿ 13,089ಕ್ಕೆ ಏರಿಕೆಯಾಗಿದೆ.
ಸಾಮಾಜಿಕ ತಾರತಮ್ಯವನ್ನು ತಡೆಗಟ್ಟಲು ದೇಶದಲ್ಲಿ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಉನ್ನತ ಶಿಕ್ಷಣ ಇಲಾಖೆಯು ಶಿಕ್ಷಣ ಸಂಸ್ಥೆಗಳಲ್ಲಿ ಕೌನ್ಸೆಲಿಂಗ್ ಸೆಲ್‌ಗಳನ್ನು ಸ್ಥಾಪಿಸಿ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಸ್ಪೃಶ್ಯತೆ, ತಾರತಮ್ಯದ ವಿರುದ್ಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅದಾಗ್ಯೂ ನಾಗರಿಕ ಹಕ್ಕುಗಳ ರಕ್ಷಣೆ (PCR) ಕಾಯಿದೆ 1955, ಇದು ‘ಅಸ್ಪೃಶ್ಯತೆ’ ಮತ್ತು ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳು ಸೇರಿದಂತೆ ಸದಸ್ಯರ ಮೇಲಿನ ದೌರ್ಜನ್ಯದ ಅಪರಾಧಗಳನ್ನು ತಡೆಯಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯಗಳ ತಡೆ) (PoA) ಕಾಯಿದೆ, 1989 ಜಾರಿಯಲ್ಲಿದೆ ಎಂದು ತಿಳಿಸಿದರು.