ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗಾಗಿ ತುಮಕೂರಿನಿಂದ ಪಾದಯಾತ್ರೆ : ಜಿಲ್ಲಾಧ್ಯಕ್ಷ ಡಾ.ಜಿ.ಎನ್.ಯಶೋಧರ

ಹೊಸ ದಿಗಂತ ವರದಿ, ಚಿತ್ರದುರ್ಗ:

ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜನವರಿ ೧ ರಿಂದ ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ.ಜಿ.ಎನ್.ಯಶೋಧರ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.23 ರಿಂದ ರಾಜ್ಯಾದ್ಯಂತ ಎಲ್ಲ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ನಮ್ಮ ಮುಷ್ಕರ ಕಳೆದ 38 ದಿನಗಳಿಂದ ನಿರಂತರವಾಗಿ ನಡೆಯುತ್ತಿದೆ. ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸದಿರುವುದು ಶೋಚನೀಯ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ಅತಿಥಿ ಉಪನ್ಯಾಕರು ಕಳೆದ 5, 10,15, 20 ವರ್ಷಗಳಿಂದ ವಿವಿಧ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಇಲ್ಲದಂತಾಗಿದೆ. ಸೇವೆ ಖಾಯಂ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಕಣ್ಣಿದ್ದೂ ಕುರುಡು, ಕಿವಿ ಇದ್ದೂ ಕಿವುಡು ಎನ್ನುವಂತೆ ವರ್ತಿಸುತ್ತಿದೆ ಎಂದು ಅಸಮಾಧಾನ ಹೊರಹಾಕಿದರು.

ಕಳೆದ ಒಂದು ತಿಂಗಳಿಗೂ ಹೆಚ್ಚಿನ ಅವಧಿಗೆ ಬೀದಿಯಲ್ಲಿ ಕುಳಿತು ಪ್ರತಿಭಟನೆ ನಡೆಸಲಾಗುತ್ತಿದೆ. ಸೊಪ್ಪು, ತರಕಾರಿ, ಹಣ್ಣು ಮಾರಾಟ ಮಾಡಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ಸ್ಥಳದಲ್ಲಿ ಅಡುಗೆ ಮಾಡಿ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ ನಡೆಸುವ ಮೂಲಕ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ನಮ್ಮ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ. ಆದಾಗ್ಯೂ ಸರ್ಕಾರ ನಮಗೆ ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ದೂರಿದರು.

ಇದರ ಪರಿಣಾಮವಾಗಿ ಶಿಕ್ಷಣ ಸಚಿವರು ನಮ್ಮ ಸಂಘದ ಮುಖಂಡರ ಜೊತೆ ಮಾತುಕತೆ ನಡೆಸುವುದಾಗಿ ಡಿ.29 ರಂದು ಬೆಂಗಳೂರಿನಲ್ಲಿ ಸಭೆ ಕರೆದಿದ್ದರು. ಈ ಸಭೆಯಲ್ಲಿ ಅತಿಥಿ ಉಪನ್ಯಾಸಕರಿಗೆ 5000 ರೂ. ವೇತನದಲ್ಲಿ ಹೆಚ್ಚಳ, ತಿಂಗಳಿಗೆ ಒಂದು ದಿನ ರಜೆ, 10 ತಿಂಗಳ ಕೆಲಸ ಎನ್ನು ಹಲವು ವಿಚಾರಳ ಕುರಿತು ಚರ್ಚಿಸಲಾಯಿತು. ಆ ಮೂಲಕ ರಾಜ್ಯ ಸರ್ಕಾರ ಅತಿಥಿ ಉಪನ್ಯಾಕರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.

ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದ ನಮ್ಮ ಸಂಘಟನೆಯು ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ತುಮಕೂರಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸುವ ನಿರ್ಧಾರ ಮಾಡಲಾಗಿದೆ. ಇಷ್ಟಕ್ಕೂ ಸರ್ಕಾರ ಸ್ಪಂದಿಸದಿದ್ದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಮರಣಾಂತರ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ವಿ.ಎಸ್.ಮಂಜುನಾಥ್ ಮತ್ತಿತರರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!