ಹೊಸದಿಗಂತ ಡಿಜಿಟಲ್ ಡೆಸ್ಕ್
ಕೇಂದ್ರ ಸರ್ಕಾರದಿಂದ 2022ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಕೇಪು ಗ್ರಾಮದ ಅಮೈ ನಿವಾಸಿ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ್ ಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ.
ಕೃಷಿಯೇ ಬದುಕಿಗೆ ಮೂಲಾಧಾರವೆಂಬ ಕಲ್ಪನೆಯನ್ನು ಬಿತ್ತುತ್ತಿರುವ ಸಾಧಕ ಅಮೈ ಮಾಹಾಲಿಂಗ ನಾಯ್ಕ ಅವರು. ಪಂಪ್ ಸೆಟ್‌ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಹಿಂದಿನ ತಲೆಮಾರಿನವರು ಅವಲಂಭಿಸಿದ್ದ ಸುರಂಗ ನೀರಿನ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು, ಇದೇ ವ್ಯವಸ್ಥೆಯಲ್ಲಿ ವಿದ್ಯುತ್ ರಹಿತವಾಗಿ ಗುರುತ್ವಾಕರ್ಷಣೆಯ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಟ್ರಿಂಕ್ಲರ್ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಯಶಸ್ವಿಯಾಗಿರುವ ಇವರು ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದಿದ್ದಾರೆ.
ಪ್ರಶಸ್ತಿ ಲಭಿಸಿರುವುದು ಸಂತೋಷ
ಪ್ರಶಸ್ತಿ ಲಭಿಸಿರುವ ಸಂತೋಷವನ್ನು ತಂದಿದೆ. ಕೃಷಿ ಜೀವನದಲ್ಲಿ ಭವ್ಯ ಭಾರತದ ಭವಿಷ್ಯ ನಿಂತಿದೆ. ಇದನ್ನು ಯುವ ಶಕ್ತಿಗೆ ತಿಳಿಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಅಮೈ ಮಹಾಲಿಂಗ ನಾಯ್ಕ ಮನದಾಳದ ಮಾತುಗಳನ್ನಾಡಿದ್ದಾರೆ.