ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿರುವ ನಟ ದರ್ಶನ್, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ತೆರಳಲು ಅನುಮತಿ ಕೋರಿ ಮತ್ತೆ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಜೈಲಿನಲ್ಲೇ ಚಿಕಿತ್ಸೆ ಪಡೆಯಲು ಈ ಹಿಂದೆ ಅನುಮತಿ ದೊರೆತಿದ್ದರೂ, ನೋವು ಕಡಿಮೆಯಾಗಿಲ್ಲ ಎಂಬ ಕಾರಣಕ್ಕೆ ವಿಶೇಷ ಸೌಲಭ್ಯಗಳಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಹೊಸ ಅರ್ಜಿ ಸಲ್ಲಿಸಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್, ಬೆನ್ನುನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಫಿಸಿಯೋಥೆರಪಿ ಸೇರಿದಂತೆ ಅಗತ್ಯ ಚಿಕಿತ್ಸೆಗೆ ಅವಕಾಶ ನೀಡುವಂತೆ ಈ ಹಿಂದೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅದರಂತೆ ಜೈಲಿನಲ್ಲಿಯೇ ಚಿಕಿತ್ಸೆ ಪಡೆಯಲು ಅನುಮತಿ ನೀಡಲಾಗಿತ್ತು.
ಇದನ್ನೂ ಓದಿ:
ಆದರೆ, ಜೈಲಿನಲ್ಲಿ ಈವರೆಗೆ ಕೇವಲ ಮೂರು ಬಾರಿ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗಿದೆ. ಇದರಿಂದ ಬೆನ್ನುನೋವು ಕಡಿಮೆಯಾಗಿಲ್ಲ ಎಂದು ದರ್ಶನ್ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಜೈಲಿನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸಾ ಸೌಲಭ್ಯಗಳು ಲಭ್ಯವಿಲ್ಲವೆಂದು ಆರೋಪಿಸಿರುವ ಅವರು, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ನೀಡುವಂತೆ ಕೋರಿದ್ದಾರೆ.
ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಅರ್ಜಿ ಸಲ್ಲಿಸಿದ್ದು, ಆರೋಗ್ಯದ ವಿಚಾರವಾಗಿರುವುದರಿಂದ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ.
ಆದರೆ, ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ. ವಿಶೇಷ ಸರ್ಕಾರಿ ಅಭಿಯೋಜಕರು (ಎಸ್‌ಪಿಪಿ) ಆಕ್ಷೇಪಣೆ ಸಲ್ಲಿಸಿದ ಬಳಿಕ ಅರ್ಜಿಯ ಕುರಿತು ಮುಂದಿನ ವಿಚಾರಣೆ ನಡೆಯಲಿದೆ.



