ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯವನ್ನು ವಹಿಸಿದೆ. ಆದ್ರೆ ಭಾರತದಲ್ಲಿ ಆಯೋಜನೆಯಾಗಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಕೆಲವು ಮೈದಾನಗಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಕಣಕ್ಕಿಳಿಯಲು ತಕರಾರು ತೆಗೆದಿತ್ತು.
ಇದೀಗ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಂತೆ ಆಗಿದ್ದು, ಅಹಮದಾಬಾದ್‌ನಲ್ಲಿ ವಿಶ್ವಕಪ್ ಪಂದ್ಯಗಳನ್ನಾಡಲು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಒಪ್ಪಿಕೊಂಡಿದ್ದು, ಜೂನ್ 27ರಂದು ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಅಧಿಕೃತ ವೇಳಾಪಟ್ಟಿ ಹೊರಬೀಳಲಿದೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಜಗತ್ತಿನ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಆಕ್ಷೇಪ ವ್ಯಕ್ತಪಡಿಸಿತ್ತು. ಅದೇ ರೀತಿ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ನಡುವೆ ಬೆಂಗಳೂರಿನಲ್ಲಿ ಮತ್ತು ಪಾಕಿಸ್ತಾನ ಹಾಗೂ ಆಫ್ಘಾನಿಸ್ತಾನ ನಡುವೆ ಚೆನ್ನೈನಲ್ಲಿ ಪಂದ್ಯ ಆಯೋಜಿಸುವ ಕುರಿತಂತೆಯೂ ತಕರಾರು ತೆಗೆದಿತ್ತು. ಈ ಕುರಿತಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಬಳಿ, ಪಿಸಿಬಿ ಮೈದಾನಗಳನ್ನು ಬದಲಿಸುವಂತೆ ಮನವಿ ಮಾಡಿಕೊಂಡಿತ್ತು.
“ಏಕದಿನ ವಿಶ್ವಕಪ್ ಟೂರ್ನಿಯ ಅಧಿಕೃತ ವೇಳಾಪಟ್ಟಿಯು ಮಂಗಳವಾರ ಪ್ರಕಟವಾಗಲಿದೆ. ಐಸಿಸಿ ಆಯೋಜಿಸಿದ ವೇಳಾಪಟ್ಟಿಯನ್ನು ಪಾಕಿಸ್ತಾನ ಒಪ್ಪಿಕೊಂಡಿದೆ. ಐಸಿಸಿ ಈಗಾಗಲೇ ಸಿದ್ದಪಡಿಸಿರುವ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ ಎಂದು ಬಿಸಿಸಿಐ ಉನ್ನತ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಎಲ್ಲವೂ ಅಂದುಕೊಂಡಂತೆ ಸಾಗಿದರೆ, ಮುಂಬರುವ ಅಕ್ಟೋಬರ್ 05ರಂದು ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದ್ದು, ಫೈನಲ್ ಪಂದ್ಯವು ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.