ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಅರ್ನಿಯಾ ಅಂತಾರಾಷ್ಟ್ರೀಯ ಗಡಿಯಲ್ಲಿ, ಪಾಕಿಸ್ತಾನ ಮತ್ತೊಮ್ಮೆ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನ ಸೇನೆಯ ಗುಂಡಿನ ದಾಳಿಗೆ ದಿಟ್ಟ ಪ್ರತ್ಯುತ್ತರ ನೀಡಿದ ಭಾರತೀಯ ಸೈನಿಕರು ಗುಂಡಿನ ದಾಳಿಯನ್ನು ಹಿಮ್ಮೆಟ್ಟಿಸಿದರು.
ಗುರುವಾರ ರಾತ್ರಿ ಜಮ್ಮುವಿನ ಅರ್ನಿಯಾ ಸೆಕ್ಟರ್‌ನಲ್ಲಿರುವ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಸೈನಿಕರು ಮಾರ್ಟರ್ ಶೆಲ್‌ಗಳನ್ನು ಹಾರಿಸಿರುವುದಾಗಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ತಿಳಿಸಿದೆ. ಪಾಪಿ ಪಾಕ್ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಬಿಎಸ್‌ಎಫ್ ಯೋಧ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು.
ಫೆಬ್ರವರಿ 25, 2021 ರಂದು ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದವು. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಇತರ ವಲಯಗಳಲ್ಲಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಕದನ ವಿರಾಮದ ಎಲ್ಲಾ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಎರಡೂ ರಾಷ್ಟ್ರಗಳು ಒಪ್ಪಿಕೊಂಡಿದ್ದವು. ಆದರೆ, ಪಾಕಿಸ್ತಾನ ಈವರೆಗೂ 12 ಬಾರಿ ಕದನ ವಿರಾಮ ಉಲ್ಲಂಘಿಸಿದೆ.