ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಅಮಾಯಕರ ಸಾವಿನ ನಂತರ ಭಾರತವು ಪಾಕ್ ಜೊತೆಗಿನ ರಾಜತಾಂತ್ರಿಕ ಸಬಂಧವನ್ನು ಕಡಿದುಕೊಂಡಿದೆ. ಸಿಂಧೂ ನದಿ ಒಪ್ಪಂದ ರದ್ದು ಸೇರಿದಂತೆ ಹಲವು ಕಠಿಣ ನಿರ್ಧಾರ ಕೈಗೊಂಡಿದೆ.
ಈ ಬೆನ್ನಲ್ಲೇ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಇಂದು ಮಹತ್ವದ ಭದ್ರತಾ ಸಭೆ ನಡೆಸಿದ್ದಾರೆ. ಪಾಕಿಸ್ತಾನದ ಮೂರು ಸೇನಾಪಡೆಗಳ ಮುಖ್ಯಸ್ಥರು, ಪ್ರಮುಖ ಸಚಿವರು, ಉನ್ನತ ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳೊಂದಿಗೆ ಪಾಕ್ ಪ್ರಧಾನಿ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಪಾಕಿಸ್ತಾನ ಪಾಲಿನ ನೀರನ್ನು ತಡೆಯಲು ಭಾರತ ಪ್ರಯತ್ನಿಸಿದ್ರೆ, ಅದನ್ನು ಯುದ್ಧದ ಕೃತ್ಯವೆಂದು ಪರಿಗಣಿಸುವುದಾಗಿ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ವರದಿ ಮಾಡಿವೆ.
ಪಾಕಿಸ್ತಾನ ಕೂಡ ಭಾರತ ವಿರೋಧಿ ನಿರ್ಧಾರಗಳನ್ನು ಇಂದಿನ ಸಭೆಯಲ್ಲಿ ತೆಗೆದುಕೊಂಡಿದೆ. ಭಾರತದ ಒಡೆತನದ ಮತ್ತು ಭಾರತದ ವಿಮಾನಯಾನ ಸಂಸ್ಥೆಗಳಿಗೆ ಪಾಕಿಸ್ತಾನದ ವಾಯುಸೀಮೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಶಿಮ್ಲಾ ಒಪ್ಪಂದ ಸೇರಿದಂತೆ ಭಾರತದೊಂದಿಗಿನ ಎಲ್ಲಾ ದ್ವಿಪಕ್ಷೀಯ ಒಪ್ಪಂದಗಳನ್ನು ನಾವು ಸ್ಥಗಿತಗೊಳಿಸುತ್ತಿದ್ದೇವೆ ಎಂದು ಪಾಕಿಸ್ತಾನ ಹೇಳಿದೆ.