ಹೊಸದಿಗಂತ ಡಿಜಿಟಲ್ ಡೆಸ್ಕ್:
2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಸಮುದಾಯದ ಮುಖಂಡರನ್ನು ಮಾತುಕತೆಗೆ ಆಹ್ವಾನಿಸಿದ್ದೆ. ಆದರೆ ಅವರು ಬರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.
ಪಂಚಮಸಾಲಿ ಸಮುದಾಯದ ಹೋರಾಟ ಇಂದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಲಾಠಿ ಚಾರ್ಜ್ ನಡೆಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಸಿಎಂ , ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬರಿಗೂ ಇದ್ದು, ಅದನ್ನು ತಮ್ಮ ಸರ್ಕಾರ ವಿರೋಧಿಸುವುದಿಲ್ಲ ಎಂದು ತಿಳಿಸಿದ್ದಾರೆ.
ನಾನು ಅವರಿಗೆ ಚರ್ಚೆಗೆ ಬರುವಂತೆ ಹೇಳಿದ್ದೆ, ಆದರೆ ಅವರು ಬಂದಿಲ್ಲ. ನಾನು ಸಮುದಾಯದ ಹತ್ತು ಪ್ರತಿನಿಧಿಗಳಿಗೆ ಮಾತುಕತೆಗೆ ಬರುವಂತೆ ಹೇಳಿದ್ದೇನೆ. ಆದರೆ ಅವರು ಬರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.